ಜಿಲ್ಲೆಯ 0-5 ವರ್ಷದೊಳಗಿನ ಪ್ರತಿಯೊಬ್ಬ ಮಕ್ಕಳಿಗೂ ಪಲ್ಸ್ ಪೋಲಿಯೋ ಲಸಿಕೆ ನೀಡಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ: ಜಿಲ್ಲೆಯಾದ್ಯಂತ ಜೂನ್ 28 ರ ಭಾನುವಾರದಂದು ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಅಭಿಯಾನದಡಿ 0-5 ವರ್ಷದೊಳಗಿನ ಪ್ರತಿಯೊಬ್ಬ ಮಕ್ಕಳಿಗೆ ಪೋಲಿಯೋ ಲಸಿಕೆಯನ್ನು ನೀಡಬೇಕೆಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಕರೆ ನೀಡಿದರು.

ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಜಿಲ್ಲಾ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಜೂನ್ 28 ರ ಭಾನುವಾರ ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು ಜಿಲ್ಲೆ ಎಲ್ಲಾ 0 ಯಿಂದ 5 ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಲಸಿಕೆ ಹಾಕಿಸಿದ್ದರೂ ಅಂದು ಪೋಲಿಯೋ ಲಸಿಕೆ ಹಾಕಿಸಬೇಕು ಎಂದರು.

ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಒಟ್ಟು 65,401 ಮಕ್ಕಳನ್ನು ಗುರುತಿಸಲಾಗಿದೆ. 19 ಟ್ರಾನ್ಸಿಟ್, 3 ಮೊಬೈಲ್ ತಂಡಗಳು ಸೇರಿದಂತೆ ಒಟ್ಟು 665 ಬೂತ್‍ಗಳು ಕಾರ್ಯ ನಿರ್ವಹಿಸಲಿವೆ. 2660 ಲಸಿಕಾ ಕಾರ್ಯಕರ್ತರಿದ್ದು, 155 ಮೇಲ್ವಿಚಾರಕರನ್ನು ಲಸಿಕಾ ಕಾರ್ಯಕ್ಕೆ ನೇಮಿಸಲಾಗಿದೆ ಎಂದರು.
ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು 1995 ರಿಂದ ಜಾರಿಗೆ ತರಲಾಗುತ್ತಿದೆ. ನಮ್ಮ ದೇಶದಲ್ಲಿ ಯಾವುದೇ ಒಂದು ಪ್ರಕರಣಗಳು ಸಹ ಕಂಡುಬಂದಿಲ್ಲ. ಆದರೆ ನಮ್ಮ ನೆರೆಹೊರೆಯ ದೇಶಗಳಲ್ಲಿ ಪ್ರಕರಣ ಕಂಡುಬಂದ ಹಿನ್ನೆಲೆ, ನಮ್ಮಲ್ಲಿಯೂ ಸಹ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲಾ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದ ಅವರು, ಆರೋಗ್ಯ ಇಲಾಖೆ ಸಿಬ್ಬಂದಿಗಳೂ, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಸಕ್ರೀಯವಾಗಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರತಿಶತಃ ನೂರರಷ್ಟು ಸಾಧನೆ ಮಾಡಬೇಕೆಂದರು.
ಪೋಲಿಯೋ ಬೂತ್‍ಗಳನ್ನು ತೆರೆಯಲು ಶಾಲಾ ಕೊಠಡಿಗಳು, ಅಂಗನವಾಡಿ ಕಟ್ಟಡಗಳು ಸೇರಿದಂತೆ ಅಗತ್ಯವಿರುವ ಇತರ ಸರ್ಕಾರಿ ಮತ್ತು ಅರೆ ಸರ್ಕಾರಿ ಕಟ್ಟಡಗಳ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕು. ಜೂ. 25 ರಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮ ಮುಗಿಯುವವರೆಗೂ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಮೆಸ್ಕಾಂ ಇಲಾಖೆಯ ಅಧಿಕಾರಿಗಳು ಸೂಚಿಸಿದರು.

ಸಭೆಯಲ್ಲಿ ಪೌರಾಯುಕ್ತ ಮಹಾಂತೇಶ ಹಂಗರಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಜ್ಯೋತ್ಸ್ನಾ ಬಿ.ಕೆ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ನಾಗರತ್ನ, ವಿವಿಧ ಜಿಲ್ಲಾ ಮಟ್ಟದ ಅನುಷ್ಟಾನಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *