ಮಂಗಳೂರು: ಕಳೆದ 26 ವರ್ಷಗಳಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅರುಣಕಾಂತ ಅವರು ಸರಕಾರಿ ಸೇವೆಯಿಂದ ಅಕ್ಟೋಬರ್ 31 ರಂದು ನಿವೃತ್ತರಾದರು.

ಇಲಾಖೆಯಲ್ಲಿ ಚಾಲಕರಾಗಿ 1999ರಲ್ಲಿ ನೇಮಕಗೊಂಡ ಅವರು, ಬೆಂಗಳೂರು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿದ್ದಾರೆ.
ನಿವೃತ್ತಿ ಹಿನ್ನೆಲೆಯಲ್ಲಿ ಶನಿವಾರ ವಾರ್ತಾ ಇಲಾಖೆ ಕಚೇರಿಯಲ್ಲಿ ಅರುಣಕಾಂತ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.
ಸಮಾರಂಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಶ್ರೀನಿವಾಸ ನಾಯಕ್ ಮಾತನಾಡಿ, ವಾರ್ತಾ ಇಲಾಖೆಯಲ್ಲಿ ಚಾಲಕರಾಗಿ ಅರುಣಕಾಂತ ಅವರ ಸೇವೆ ಶ್ಲಾಘನೀಯ. ಪತ್ರಕರ್ತರೊಂದಿಗೆ ಉತ್ತಮ ಸಂಬಂಧ ಹೊಂದಿ, ಸರಕಾರಿ ಕಾರ್ಯಕ್ರಮಗಳಲ್ಲಿ ಮಾಧ್ಯಮ ನಿರ್ವಹಣೆಯಲ್ಲಿ ಅಹರ್ನಿಶಿ ದುಡಿದಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ, ವಾರ್ತಾ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
