ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ, ವಿಶ್ವವಿದ್ಯಾನಿಲಯ ಕಾಲೇಜು ಹಾಗೂ ಹಳೆ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ ಕಾಲೇಜು (ಮಂಗಳೂರು ವಲಯ) ಪುರುಷರ ವಾಲಿಬಾಲ್ ಹಾಗೂ ಮಹಿಳೆಯರ ಥ್ರೋಬಾಲ್ ಪಂದ್ಯಾವಳಿಗಳು ಇಂದು ಯಶಸ್ವಿಯಾಗಿ ಸಂಪನ್ನಗೊಂಡವು.

ಪುರುಷರ ವಾಲಿಬಾಲ್ ಪಂದ್ಯಾವಳಿಯಲ್ಲಿ ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಬಿಸಿನೆಸ್ ಮ್ಯಾನೇಜ್ಮೆಂಟ್ ಕಾಲೇಜು ಪ್ರಥಮ ಸ್ಥಾನ ಗಳಿಸಿದರೆ, ಕುದ್ರೋಳಿಯ ನಾರಾಯಣ ಗುರು ಕಾಲೇಜು ದ್ವಿತೀಯ ಸ್ಥಾನ ಪಡೆದುಕೊಂಡಿತು. ಆತಿಥೇಯ ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ತೃತೀಯ ಸ್ಥಾನ ಗಳಿಸಿದರೆ, ಮಿಲಾಗ್ರೆಸ್ ಕಾಲೇಜು ನಾಲ್ಕನೇ ಸ್ಥಾನ ಪಡೆಯಿತು.
ಮಹಿಳೆಯರ ಥ್ರೋಬಾಲ್ ಪಂದ್ಯಾವಳಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು, ಕೊಣಾಜೆ ಪ್ರಥಮ ಸ್ಥಾನ ಗಳಿಸಿತು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಬಿಸಿನೆಸ್ ಮ್ಯಾನೇಜ್ಮೆಂಟ್ ಕಾಲೇಜು ದ್ವಿತೀಯ ಸ್ಥಾನ ಪಡೆದರೆ, ಪುತ್ತೂರಿನ ವಿವೇಕಾನಂದ ಕಾಲೇಜು ತೃತೀಯ ಸ್ಥಾನ ಗಳಿಸಿತು. ಆತಿಥೇಯ ವಿಶ್ವವಿದ್ಯಾನಿಲಯ ಕಾಲೇಜು ನಾಲ್ಕನೇ ಸ್ಥಾನ ಪಡೆದುಕೊಂಡಿತು.
ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲ ಪ್ರೊ. ಜಯವಂತ ನಾಯಕ್ ಮಾತನಾಡಿ, ಪಂದ್ಯಾವಳಿಯನ್ನು ಯಶಸ್ವಿಯಾಗಿ ಆಯೋಜಿಸಲು ಸಹಕಾರ ನೀಡಿದ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ, ಹಳೆ ವಿದ್ಯಾರ್ಥಿ ಸಂಘ, ತೀರ್ಪುಗಾರರು ಹಾಗೂ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿದರು. ಕ್ರೀಡೆಯಲ್ಲಿ ಭಾಗವಹಿಸುವುದೇ ಮಹತ್ವದ ಸಾಧನೆಯಾಗಿದ್ದು, ವಿಜೇತ ತಂಡಗಳು ಮುಂದಿನ ಹಂತಗಳಲ್ಲಿಯೂ ಉತ್ತಮ ಸಾಧನೆ ಮಾಡಲಿ ಎಂದು ಹಾರೈಸಿದರು.
ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಹಾಗೂ ಹಳೆ ವಿದ್ಯಾರ್ಥಿ ಸಂಘದ ನಿಕಟಪೂರ್ವ ಅಧ್ಯಕ್ಷ ಕರ್ನಲ್ ನಿಟ್ಟೆಗುತ್ತು ಶರತ್ ಭಂಡಾರಿ, “ಗೆಲುವು ಮತ್ತು ಸೋಲು ಆಟದ ಸಹಜ ಭಾಗಗಳು. ಗೆದ್ದಾಗ ಹಿಗ್ಗದೆ, ಸೋತಾಗ ಕುಗ್ಗದೆ ಸಮಚಿತ್ತದಿಂದ ಸ್ವೀಕರಿಸಬೇಕು. ಸೋಲು ಮುಂದಿನ ಗೆಲುವಿಗೆ ಮೆಟ್ಟಿಲಾಗಬೇಕು. ಯಾವುದೇ ಸಂದರ್ಭದಲ್ಲಿಯೂ ಗೆಲುವಿನ ಪ್ರಯತ್ನವನ್ನು ಕೈಬಿಡಬಾರದು” ಎಂದು ಕ್ರೀಡಾಪಟುಗಳಿಗೆ ಕಿವಿಮಾತು ಹೇಳಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿಸೋಜಾ ಮಾತನಾಡಿ, ಕ್ರೀಡೆಯು ದೈಹಿಕ ಸಾಮರ್ಥ್ಯದ ಜೊತೆಗೆ ಶಿಸ್ತು, ನಾಯಕತ್ವ, ತಂಡದ ಮನೋಭಾವ ಮತ್ತು ಆತ್ಮವಿಶ್ವಾಸವನ್ನು ಬೆಳೆಸುವ ಪ್ರಮುಖ ಸಾಧನವಾಗಿದೆ. ವಿದ್ಯಾರ್ಥಿಗಳು ಪಠ್ಯದೊಂದಿಗೆ ಕ್ರೀಡೆಗೂ ಸಮಾನ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮದಾಸ ಗೌಡ ಮಾತನಾಡಿ, ಕಾಲೇಜಿನ ಕ್ರೀಡಾ ಚಟುವಟಿಕೆಗಳಿಗೆ ಹಳೆ ವಿದ್ಯಾರ್ಥಿ ಸಂಘ ಸದಾ ಪ್ರೋತ್ಸಾಹ ಮತ್ತು ಸಹಕಾರ ನೀಡಲು ಸಿದ್ಧವಿದೆ. ಇಂತಹ ಕ್ರೀಡಾಕೂಟಗಳು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಕ್ರೀಡಾಸ್ಫೂರ್ತಿಯನ್ನು ಬೆಳೆಸುತ್ತವೆ ಎಂದರು.
ಹಳೆ ವಿದ್ಯಾರ್ಥಿ ಸಂಘದ ಖಜಾಂಚಿ ಮೋಹನ್ ದಾಸ್ ಮಾತನಾಡಿ, ಕ್ರೀಡಾಕೂಟಗಳ ಆಯೋಜನೆಯು ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಲು ಮತ್ತು ಅವರಿಗೆ ಸೂಕ್ತ ವೇದಿಕೆ ಕಲ್ಪಿಸಲು ಸಹಕಾರಿಯಾಗಿದೆ. ಮುಂದಿನ ದಿನಗಳಲ್ಲಿಯೂ ಇಂತಹ ಚಟುವಟಿಕೆಗಳಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.
ಎಸ್ಡಿಎಂ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಭರತ್ ಕುಮಾರ್ ಜೈನ್ ಮಾತನಾಡಿ, ಕ್ರೀಡಾಪಟುಗಳು ನಿರಂತರ ಅಭ್ಯಾಸ, ಶಿಸ್ತು ಮತ್ತು ಕಠಿಣ ಪರಿಶ್ರಮದ ಮೂಲಕ ತಮ್ಮ ಕ್ರೀಡಾ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ವಿಶ್ವವಿದ್ಯಾನಿಲಯ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಹರಿದಾಸ ಕುಳೂರು ಉಪಸ್ಥಿತರಿದ್ದರು. ಕಾಲೇಜಿನ ವಿವಿಧ ವಿಭಾಗಗಳ ಉಪನ್ಯಾಸಕರು, ಸಿಬ್ಬಂದಿ ವರ್ಗ ಹಾಗೂ ಕ್ರೀಡಾಪಟುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
