ಮೂಡುಬಿದಿರೆ: ಇಂದಿನ ಡಿಜಿಟಲ್ ಯುಗದಲ್ಲಿ ಸಾಕ್ಷರತೆ ಎಂದರೆ ಕೇವಲ ಓದು ಮತ್ತು ಬರವಣಿಗೆಯ ಜ್ಞಾನಕ್ಕೆ ಸೀಮಿತವಾಗಿಲ್ಲ. ಅಂತರ್ಜಾಲ ಮತ್ತು ಸಾಮಾಜಿಕ ಜಾಲತಾಣಗಳನ್ನು ಸುರಕ್ಷಿತವಾಗಿ ಹಾಗೂ ಜವಾಬ್ದಾರಿಯುತವಾಗಿ ಬಳಸುವ ಜ್ಞಾನವೂ ಅಷ್ಟೇ ಅಗತ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಸಂದೀಪ ಹೇಳಿದರು.



ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ಗುರುವಾರ ಕಾಲೇಜಿನ ಮಲ್ಟಿಮೀಡಿಯಾ ಸ್ಟುಡಿಯೋದಲ್ಲಿ ಆಯೋಜಿಸಿದ್ದ ‘ಡಿಜಿಟಲ್ ಸಾಕ್ಷಾರತೆ ಮತ್ತು ಸೈಬರ್ ಸುರಕ್ಷತೆ’ ಕುರಿತ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.
ಡಿಜಿಟಲ್ ತಂತ್ರಜ್ಞಾನದ ಬಳಕೆ ಮತ್ತು ಸಾಮಾಜಿಕ ಜಾಲತಾಣಗಳ ವ್ಯಾಪ್ತಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೈಬರ್ ಅಪರಾಧ, ಆನ್ಲೈನ್ ವಂಚನೆ, ವೈಯಕ್ತಿಕ ಮಾಹಿತಿಯ ಕಳವು ಹಾಗೂ ನಕಲಿ ಸುದ್ದಿಗಳಂತಹ ಸವಾಲುಗಳೂ ಹೆಚ್ಚುತ್ತಿವೆ. ಇಂತಹ ಸಮಸ್ಯೆಗಳಿಂದ ಸುರಕ್ಷಿತವಾಗಿರಲು ಡಿಜಿಟಲ್ ಮಾಧ್ಯಮಗಳನ್ನು ಜವಾಬ್ದಾರಿಯುತವಾಗಿ ಬಳಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳ್ಳುವಾಗ ಎಚ್ಚರಿಕೆ ವಹಿಸಬೇಕು. ಬಲವಾದ ಪಾಸ್ವರ್ಡ್ಗಳನ್ನು ಬಳಸುವುದು, ಅಪರಿಚಿತ ಲಿಂಕ್ಗಳನ್ನು ತೆರೆಯದಿರುವುದು ಹಾಗೂ ಒಟಿಪಿ ಮತ್ತು ಬ್ಯಾಂಕ್ ಖಾತೆಯ ವಿವರಗಳನ್ನು ಯಾರೊಂದಿಗೂ ಹಂಚಿಕೊಳ್ಳದಿರುವುದು ಸೈಬರ್ ಸುರಕ್ಷತೆಯ ಪ್ರಮುಖ ಕ್ರಮಗಳಾಗಿವೆ ಎಂದು ತಿಳಿಸಿದರು.
ಅಂತರ್ಜಾಲದಲ್ಲಿ ದೊರೆಯುವ ಪ್ರತಿಯೊಂದು ಮಾಹಿತಿಯನ್ನೂ ನಂಬುವ ಬದಲು ಅದರ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಡಿಜಿಟಲ್ ಜಗತ್ತಿನಲ್ಲಿ ಜಾಗರೂಕತೆ ಮತ್ತು ಹೊಣೆಗಾರಿಕೆಯ ಬಳಕೆ ಅತ್ಯಗತ್ಯವಾಗಿದ್ದು, ವಿದ್ಯಾರ್ಥಿಗಳು ಸೈಬರ್ ಅಪರಾಧಗಳ ಬಗ್ಗೆ ಅರಿವು ಹೊಂದಬೇಕು ಎಂದರು.
ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ ಡಾ. ಶ್ರೀನಿವಾಸ್ ಎಚ್. ಆರ್., ಸಹಾಯಕ ಪ್ರಾಧ್ಯಾಪಕ ಹರ್ಷವರ್ಧನ್ ಪಿ. ಆರ್. ಹಾಗೂ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಭಾಗ್ಯಶ್ರೀ ಶೇರಿಗಾರ್ ಕಾರ್ಯಕ್ರಮ ನಿರೂಪಿಸಿ, ಕಾವ್ಯ ನಾರಾಯಣ ವಂದಿಸಿದರು.
