ಅಜೆಕಾರು: ಪದ್ಮನಗರದ ಅಜೆಕಾರು ಜ್ಞಾನಸುಧಾ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವು ನ. 15 ರಂದು ಕಾರ್ಕಳ ಜ್ಞಾನಸುಧಾ ಗಣಿತನಗರ ಕ್ರೀಡಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು.



ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಅಂತಾರಾಷ್ಟ್ರೀಯ ಈಜುಪಟು ವಿಜೇತ ಪೈ ಅವರು ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಯ ಮಹತ್ವವನ್ನು ವಿವರಿಸಿದರು. ಸಮಾರಂಭದಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಟ್ರಸ್ಟಿ ಅನಿಲ್ ಕುಮಾರ್ ಜೈನ್ ಅವರು ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಸಹಪಠ್ಯ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ದಿನೇಶ್ ಎಂ. ಕೊಡವೂರು ಅವರು ಮಾತನಾಡಿ, ಕ್ರೀಡಾಪಟುಗಳು ಸೋಲು ಮತ್ತು ಗೆಲುವುಗಳೆರಡನ್ನೂ ಸಮಾನವಾಗಿ ಸ್ವೀಕರಿಸುವ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ವೇದಿಕೆಯಲ್ಲಿದ್ದ ಗಣ್ಯರು ಕ್ರೀಡಾ ಪ್ರತಿನಿಧಿಗಳ ಮೂಲಕ ಕ್ರೀಡಾ ಜ್ಯೋತಿಯನ್ನು ಬೆಳಗಿಸಿ, ಧ್ವಜಾರೋಹಣ ನೆರವೇರಿಸಿದರು. ಬಳಿಕ ಸ್ಫೂರ್ತಿಯ ಸಂಕೇತವಾಗಿ ಬಲೂನುಗಳನ್ನು ಆಗಸಕ್ಕೆ ಹಾರಿಬಿಡುವ ಮೂಲಕ ಕ್ರೀಡೋತ್ಸವಕ್ಕೆ ಅಧಿಕೃತ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಪದ್ಮಪ್ರಿಯಾ ಪ್ರಾರ್ಥಿಸಿದರು. ಪ್ರಾಂಶುಪಾಲರಾದ ಸಂತೋಷ್ ಅವರು ಸ್ವಾಗತಿಸಿದರು. ಉಪಪ್ರಾಂಶುಪಾಲೆ ಆರತಿ ವಂದನಾರ್ಪಣೆ ಗೈದರು ಮತ್ತು ಶಿಕ್ಷಕಿ ವಿಜೇತಾರಾಣಿ ಕಾರ್ಯಕ್ರಮವನ್ನು ನಿರೂಪಿಸಿದರು.
