ರಕ್ತದಾನ ಜೀವ ಉಳಿಸುವ ಶ್ರೇಷ್ಠ ಮಾನವೀಯ ಸೇವೆ: ಡಾ. ಶೆಟ್ಟಿ

ಮೂಡುಬಿದಿರೆ: ರಕ್ತದಾನವು ಮತ್ತೊಂದು ಜೀವಕ್ಕೆ ಮರುಜೀವ ನೀಡುವ ಮಹತ್ವದ ಮಾನವೀಯ ಸೇವೆಯಾಗಿದ್ದು, ಆರೋಗ್ಯವಂತ ಪ್ರತಿಯೊಬ್ಬರೂ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಸಮಾಜದ ಆರೋಗ್ಯ ರಕ್ಷಣೆಯಲ್ಲಿ ಕೈಜೋಡಿಸಬೇಕು ಎಂದು ಆಳ್ವಾಸ್ ವೈದ್ಯಕೀಯ ಕಾಲೇಜಿನ ಡೀನ್ ಡಾ. ಮಹಾಬಲ ಶೆಟ್ಟಿ ನುಡಿದರು.

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆ ಘಟಕ, ಆಳ್ವಾಸ್ ಹೆಲ್ತ್ ಸೆಂಟರ್ ಹಾಗೂ ಆಳ್ವಾಸ್ ರೋಟರಿ ಬ್ಲಡ್ ಸೆಂಟರ್ ಸಹಯೋಗದಲ್ಲಿ ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆಯ ಅಂಗವಾಗಿ ಬುಧವಾರ ಮೂಡುಬಿದಿರೆಯ ಆಳ್ವಾಸ್ ಕಾಲೇಜ್ ಆಫ್ ನರ್ಸಿಂಗ್ ನಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರ ಹಾಗೂ ರಕ್ತದಾನಿಗಳ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಕ್ತದಾನವು ಅತ್ಯಂತ ಶ್ರೇಷ್ಠ ಮಾನವೀಯ ಸೇವೆಯಾಗಿದ್ದು, ಒಬ್ಬ ವ್ಯಕ್ತಿಯ ರಕ್ತದಾನದಿಂದ ಮತ್ತೊಂದು ಜೀವವನ್ನು ಉಳಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಆರೋಗ್ಯವಂತರು ರಕ್ತದಾನಕ್ಕೆ ಮುಂದಾಗಬೇಕು ಎಂದರು.

ನಿರಂತರ ರಕ್ತದಾನದ ಮೂಲಕ ಜೀವ ಉಳಿಸುವ ಸೇವೆಯಲ್ಲಿ ತೊಡಗಿಸಿಕೊಂಡಿರುವ ವಿಜಯ ಎಸ್. ಪೂಜಾರಿ (88 ಬಾರಿ), ಡಾ. ರವಿಪ್ರಸಾದ ಹೆಗ್ಡೆ (44 ಬಾರಿ), ತಾರನಾಥ್ (27 ಬಾರಿ) ಹಾಗೂ ಡಯನಾ ಸೆರವೋ (11 ಬಾರಿ) ರವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಳ್ವಾಸ್ ಹೆಲ್ತ್ ಸೆಂಟರ್‍ನ ಉಪವೈದ್ಯಕೀಯ ಅಧೀಕ್ಷಕ ಡಾ. ಶಮಂತ್ ಶೆಟ್ಟಿ ವಹಿಸಿದ್ದರು. ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ. ಅಕ್ಷತಾ ಹಾಗೂ ಆಳ್ವಾಸ್ ರೋಟರಿ ಬ್ಲಡ್ ಸೆಂಟರ್‍ನ ಉಸ್ತುವಾರಿ ಡಾ. ಅರುಣಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಶಿಬಿರದಲ್ಲಿ ಒಟ್ಟು 97 ಮಂದಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು. ಡಾ. ಪ್ರಮಿತಾ ಕಾರ್ಯಕ್ರಮ ನಿರೂಪಿಸಿ, ಡಾ. ಆಶೀಶ್ ಶರ್ಮಾ ಸ್ವಾಗತಿಸಿ, ಡಾ. ಅಶೋಕ್ ಮರಾಠೆ ವಂದಿಸಿದರು.

Leave a Reply

Your email address will not be published. Required fields are marked *