ಪುತ್ತೂರು: ಭಾರತದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಹಕ್ಕುಗಳನ್ನು ನೀಡುವುದರ ಜೊತೆಗೆ ಕರ್ತವ್ಯಗಳನ್ನೂ ವಿಧಿಸಿದೆ. ಮೂಲಭೂತ ಹಕ್ಕುಗಳನ್ನು ಕೇಳುವ ಮೊದಲು, ಪ್ರತಿಯೊಬ್ಬ ಭಾರತೀಯ ಪ್ರಜೆಯೂ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮೂಲಭೂತ ಕರ್ತವ್ಯಗಳನ್ನು ಪಾಲಿಸುವ ಜವಾಬ್ದಾರಿಯನ್ನು ಅರಿತುಕೊಳ್ಳಬೇಕು ಎಂದು ಸಂತ ಫಿಲೋಮಿನಾ ಕಾಲೇಜಿನ ಕಲಾ ವಿಭಾಗದ ಡೀನ್ ಹಾಗೂ ಶೈಕ್ಷಣಿಕ ವಿಭಾಗದ ಕುಲಸಚಿವರಾದ ಡಾ. ನಾರ್ಬರ್ಟ್ ಮಸ್ಕರೇನ್ಹಸ್ ಹೇಳಿದರು.


ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನಲ್ಲಿ ನವೆಂಬರ್ 26ರಂದು ಆಯೋಜಿಸಲಾದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.
ಭಾರತದ ಸಂವಿಧಾನವು ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಉದಾತ್ತ ಆಶಯಗಳನ್ನು ಒಳಗೊಂಡಿದೆ. ಸಂವಿಧಾನವು ಕೇವಲ ಕಾನೂನುಗಳ ಸಂಕಲನವಲ್ಲ; ಅದು ವೈವಿಧ್ಯಮಯ ಸಂಸ್ಕೃತಿ, ಭಾಷೆ ಮತ್ತು ಧರ್ಮಗಳನ್ನು ಹೊಂದಿರುವ ಭಾರತೀಯರನ್ನು ಒಗ್ಗೂಡಿಸುವ ಪ್ರಜಾಪ್ರಭುತ್ವದ ಬುನಾದಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಸಂವಿಧಾನದ ಪ್ರಸ್ತಾವನೆಯ ಮಹತ್ವವನ್ನು ವಿವರಿಸಿದ ಅವರು, ಪ್ರಜಾಪ್ರಭುತ್ವವೆಂದರೆ ಕೇವಲ ಚುನಾವಣೆಗಳಲ್ಲಿ ಮತ ಚಲಾಯಿಸುವುದಲ್ಲ. ಕಾನೂನಿನ ಆಳ್ವಿಕೆಯನ್ನು ಗೌರವಿಸುವುದು, ವ್ಯಕ್ತಿ ಸ್ವಾತಂತ್ರ್ಯವನ್ನು ಕಾಪಾಡುವುದು, ಸಮಾನತೆಯನ್ನು ಎತ್ತಿಹಿಡಿಯುವುದು ಮತ್ತು ಅಧಿಕಾರದಲ್ಲಿರುವವರನ್ನು ಹೊಣೆಗಾರರನ್ನಾಗಿಸುವುದೂ ಪ್ರಜಾಪ್ರಭುತ್ವದ ಪ್ರಮುಖ ಲಕ್ಷಣಗಳಾಗಿವೆ ಎಂದರು.
ಜಾತಿ ಮತ್ತು ಧರ್ಮದ ಆಧಾರದ ಮೇಲಿನ ತಾರತಮ್ಯ, ಕೋಮುವಾದ, ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆ, ಭ್ರಷ್ಟಾಚಾರ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿನ ಸುಳ್ಳು ಸುದ್ದಿಗಳು ಸಂವಿಧಾನದ ಮೌಲ್ಯಗಳಿಗೆ ಸವಾಲಾಗಿವೆ. ವಿದ್ಯಾರ್ಥಿಗಳು ಯಾವುದೇ ಮಾಹಿತಿಯನ್ನು ನಂಬುವ ಅಥವಾ ಹಂಚಿಕೊಳ್ಳುವ ಮೊದಲು ಅದರ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕು. ಯುವಜನತೆ ವಿಮರ್ಶಾತ್ಮಕ ಚಿಂತನೆ, ವೈಜ್ಞಾನಿಕ ಮನೋಭಾವ ಮತ್ತು ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ವಿದ್ಯಾರ್ಥಿಗಳು ಜಾತಿ, ಧರ್ಮ, ಭಾಷೆ ಮತ್ತು ಲಿಂಗದ ಭೇದವಿಲ್ಲದೆ ಪರಸ್ಪರ ಗೌರವದಿಂದ ನಡೆದುಕೊಳ್ಳಬೇಕು. ತಮ್ಮ ಮತದಾನದ ಹಕ್ಕನ್ನು ಜವಾಬ್ದಾರಿಯುತವಾಗಿ ಚಲಾಯಿಸುವುದರ ಜೊತೆಗೆ ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿಯೂ ತೊಡಗಿಸಿಕೊಳ್ಳಬೇಕು. ಸಂವಿಧಾನದ ಆಶಯಗಳು ನಮ್ಮ ದೈನಂದಿನ ನಡವಳಿಕೆಯಲ್ಲಿ ಪ್ರತಿಫಲಿಸಬೇಕು ಎಂದು ಅವರು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ ಅವರು ಮಾತನಾಡಿ, ಮೂಲಭೂತ ಹಕ್ಕುಗಳನ್ನು ಪ್ರತಿಪಾದಿಸುವುದರ ಜೊತೆಗೆ ಪ್ರತಿಯೊಬ್ಬರೂ ತಮ್ಮ ಮೂಲಭೂತ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ಪಾಲಿಸಬೇಕು. ಹಕ್ಕುಗಳು ಮತ್ತು ಕರ್ತವ್ಯಗಳ ನಡುವಿನ ಸಮತೋಲನವೇ ಜವಾಬ್ದಾರಿಯುತ ನಾಗರಿಕತ್ವದ ಆಧಾರವಾಗಿದೆ ಎಂದರು.
ಕಾರ್ಯಕ್ರಮದ ಅಂಗವಾಗಿ ಸಂವಿಧಾನ ದಿನದ ಪ್ರತಿಜ್ಞಾ ವಿಧಿಯನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದರೆ. ಡಾ. ಎ. ಪಿ. ಮೊಂತೆರೊ ಅವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಈ ಸಂದರ್ಭದಲ್ಲಿ ಬೋಧಕ ವೃಂದ ಹಾಗೂ ವಿದ್ಯಾರ್ಥಿಗಳು ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮೌಲ್ಯಗಳು ಮತ್ತು ಆದರ್ಶಗಳನ್ನು ಎತ್ತಿ ಹಿಡಿದು, ಜವಾಬ್ದಾರಿಯುತ ನಾಗರಿಕರಾಗಿ ಕರ್ತವ್ಯಗಳನ್ನು ಪಾಲಿಸುವ ಪ್ರತಿಜ್ಞೆ ಕೈಗೊಂಡರು.
ಕಾರ್ಯಕ್ರಮದ ನಿರೂಪಣೆಯನ್ನು ಸಹಾಯಕ ಪ್ರಾಧ್ಯಾಪಕರಾದ ಪೃಥ್ವಿ ಕೆ. ನಿರ್ವಹಿಸಿದರು. ಪ್ರತೀಕ್ಷಾ ಸ್ವಾಗತಿಸಿ, ಶ್ರೀಮಣಿ ವಂದಿಸಿದರು. ದ್ವಿತೀಯ ಎಂ.ಎಸ್ಸಿ. ವಿದ್ಯಾರ್ಥಿನಿ ಸೌಪರ್ಣಿಕಾ ಮತ್ತು ತಂಡದವರು ಪ್ರಾರ್ಥನೆ ಸಲ್ಲಿಸಿದರು.
