ಉಡುಪಿ: ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯು ಮಾರ್ಚ್ 18 ರಿಂದ ಏಪ್ರಿಲ್ 22 ವರೆಗೆ ಜಿಲ್ಲೆಯ 51 ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಯಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ವಿದ್ಯಾರ್ಥಿಗಳು ಸುಗಮವಾಗಿ ಭಯ ಮುಕ್ತ ವಾತಾವರಣದಲ್ಲಿ ಪರೀಕ್ಷೆ ಬರೆಯಲು ಪೂರಕ ವಾತಾವರಣ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಸೂಚನೆ ನೀಡಿದರು.
ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಲೋಪದೋಷಗಳಾಗದಂತೆ ಪರೀಕ್ಷಾ ಪಾವಿತ್ರ್ಯತೆ ಕಾಪಾಡುವುದರೊಂದಿಗೆ ಸುಲಲಿತವಾಗಿ ನಡೆಸಲು ಅಗತ್ಯವಿರುವ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು ಇದಕ್ಕೆ ಜಿಲ್ಲಾಡಳಿತದ ವತಿಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದ ಅವರು, ಜಿಲ್ಲೆಯು ಪ್ರತಿಶತಃ ನೂರರಷ್ಟು ಫಲಿತಾಂಶವನ್ನು ದಾಖಲಿಸಲು ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.
ಜಿಲ್ಲೆಯಲ್ಲಿ ಹೊಸದಾಗಿ 13,516 ವಿದ್ಯಾರ್ಥಿಗಳು, 295 ರೆಗ್ಯೂಲರ್ ಪುನರಾವರ್ತಿತ ಅಭ್ಯರ್ಥಿಗಳು, 293 ಖಾಸಗಿ ಅಭ್ಯರ್ಥಿಗಳು ಹಾಗೂ 47 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಇವರಲ್ಲಿ 7353 ಗಂಡು ಮಕ್ಕಳು ಹಾಗೂ 6798 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 14151 ವಿಧ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.
ಉಡುಪಿ ವಲಯದಲ್ಲಿ 15, ಬ್ರಹ್ಮಾವರದಲ್ಲಿ 11, ಕಾರ್ಕಳದಲ್ಲಿ 9, ಬೈಂದೂರು ಮತ್ತು ಕುಂದಾಪುರದಲ್ಲಿ ತಲಾ 8 ಸೇರಿದಂತೆ ಒಟ್ಟು 51 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಪರೀಕ್ಷಾ ಕೇಂದ್ರದ ಕ್ಯಾಂಪಸ್‍ಗಳಲ್ಲಿ ಸಿಸಿಟಿವಿ ಯನ್ನು ತಪ್ಪದೇ ಅಳವಡಿಸಬೇಕು. 51 ಪರೀಕ್ಷಾ ಕೇಂದ್ರಗಳಲ್ಲಿ 686 ಕೊಠಡಿಗಳನ್ನು ಪರೀಕ್ಷಾ ಕಾರ್ಯಕ್ಕೆ ನಿಗಧಿಪಡಿಸಲಾಗಿದೆ ಎಂದ ಅವರು, ಪರೀಕ್ಷೆಯನ್ನು ಯಶಸ್ವಿಯಾಗಿ ನಿರ್ವಹಿಸಲು ಅಧೀಕ್ಷಕರು, ಮೇಲ್ವಿಚಾರಕರು, ಸ್ಥಾನಿಕ ಜಾಗೃತಿ ದಳದ ಅಧಿಕಾರಿಗಳು, ಮೊಬೈಲ್ ಸ್ವಾಧೀನ ಅಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ವಿಚಕ್ಷಣಾ ದಳ, ಪರೀಕ್ಷಾ ನೋಡೆಲ್ ಅಧಿಕಾರಿಗಳು ಸೇರಿದಂತೆ ಈಗಾಗಲೇ 1350 ಅಧಿಕಾರಿ ಸಿಬ್ಬಂದಿಗಳನ್ನು ನಿಯೋಜಿಸಿರುವುದಾಗಿ ತಿಳಿಸಿದರು.
ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಮೊಬೈಲ್, ಸ್ಮಾರ್ಟ್ ವಾಚ್‍ಗಳನ್ನು ತರುವುದನ್ನು ನಿರ್ಬಂಧಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಗಡಿಯಾರಗಳನ್ನು ಅಳವಡಿಸಬೆಕು. ಪರೀಕ್ಷಾ ಕೇಂದ್ರಗಳ ಒಳಗೆ ವಿದ್ಯಾರ್ಥಿಗಳಿಗೆ ಕುಡಿಯುವ ನೀರು ಸೇರಿದಂತೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿರುವ ಬಗ್ಗೆ ಪರಿಶೀಲನೆ ನಡೆಸಲು ತಂಡವನ್ನು ನೇಮಿಸಿದ್ದು, ಈಗಾಗಲೇ ಅವರುಗಳು ಪರಿಶೀಲಿಸಿ ಮೂಲಭೂತ ಸೌಲಭ್ಯ ಅಳವಡಿಸಿರುವ ಕುರಿತು ವರದಿ ನೀಡಿರುತ್ತಾರೆ ಎಂದು ಸಭೆಗೆ ತಿಳಿಸಿದರು.
ಗ್ರಾಮೀಣ ಪ್ರದೇಶದಿಂದ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಸೂಕ್ತ ಸಮಯಕ್ಕೆ ಆಗಮಿಸಲು ಬಸ್‍ಗಳ ಕೊರತೆಯಾಗದಂತೆ ಎಚ್ಚರಿಕೆ ವಹಿಸುವುದರೊಂದಿಗೆ ಸಾಕಷ್ಟು ಬಸ್‍ಗಳನ್ನು ಪರೀಕ್ಷಾ ಸಂದರ್ಭದಲ್ಲಿ ಕಾರ್ಯಾಚರಿಸುವಂತೆ ನೋಡಿಕೊಳ್ಳಬೇಕು. ಪರೀಕ್ಷಾ ಕೇಂದ್ರದ ಬಳಿಯೆ ಬಸ್ ನಿಲುಗಡೆಗೆ ಅವಕಾಶ ಮಾಡಿಕೊಡಬೇಕು ಎಂದು ಕೆ.ಎಸ್.ಆರ್.ಟಿ.ಸಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.
ಪರೀಕ್ಷಾ ಅವಧಿಯಲ್ಲಿ ನಿರಂತರ ವಿದ್ಯುತ್ ಸರಬರಾಜು ಆಗುವಂತೆ ನೋಡಿಕೊಳ್ಳಬೇಕು. ಪರೀಕ್ಷೆ ಆರಂಭದಿಂದ ಏಪ್ರಿಲ್ ಅಂತ್ಯದವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗದಂತೆ ಮುಂಜಾಗ್ರತೆ ವಹಿಸುವಂತೆ ಮೆಸ್ಕಾಂ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು, ಬಿಸಿಲಿನಿಂದ ಶಾಖಾಘಾತಕ್ಕೆ ಮಕ್ಕಳು ತುತ್ತಾಗುವ ಸಂಭವವಿದ್ದು, ಮಕ್ಕಳಿಗೆ ತೊಂದರೆ ಆಗದಂತೆ ಪರೀಕ್ಷಾ ಕೇಂದ್ರಗಳಲ್ಲಿ ತುರ್ತು ಚಿಕಿತ್ಸೆ ನೀಡಲು ವೈದ್ಯಕೀಯ ಸಿಬ್ಬಂದಿಗಳನ್ನು ನಿಯೋಜಿಸಬೇಕು. ಓ.ಆರ್.ಎಸ್ ದ್ರಾವಣವನ್ನು ಸಹ ಹೆಚ್ಚು ಸಂಗ್ರಹಿಸಿಟ್ಟುಕೊಳ್ಳುವಂತೆ ಕ್ರಮ ವಹಿಸಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರೀಕ್ಷಾ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರದ ಸುತ್ತಲೂ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಕೇಂದ್ರದ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಆದೇಶ ಹೊರಡಿಸಲಾಗುವುದು ಎಂದರು.
ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮಾತಣಾಡಿ, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕೆಲವು ನಿಯಮಾವಳಿಗಳನ್ನು ಸಡಿಲಗೊಳಿಸದ್ದು, ವಿದ್ಯಾರ್ಥಿಗಳು ಉತ್ತೀರ್ಣರಾಗುವುದರ ಜೊತೆಗೆ ಉನ್ನತ ಶ್ರೇಣಿ ಪಡೆಯಲು ಪ್ರಯತ್ನಿಸುವಂತೆ ಅವರುಗಳಿಗೆ ಪ್ರೋತ್ಸಾಹ ನೀಡಿ, ಮನವೊಲಿಸಬೇಕು. ಬೇಸಿಗೆ ಪ್ರಾಂಭವಾಗಿರುವ ಹಿನ್ನೆಲೆ, ಕೇಂದ್ರಗಳಲ್ಲಿ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯವನ್ನು ಕಲ್ಪಿಸಿ, ನಮ್ಮದೇ ಮಕ್ಕಳು ಎಂದು ಭಾವಿಸಿ ಅವರುಗಳ ಕಾಳಜಿ ಮಾಡಬೇಕು ಎಂದರು.
ಮಂಗಳೂರು ಸಿ.ಟಿ.ಇ ಪ್ರಾಂಶುಪಾಲೆ ಹಾಗೂ ಸಹ ನಿರ್ದೇಶಕಿ ಪುಷ್ಪಲತಾ ಮಾತನಾಡಿ, ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು, ಪರೀಕ್ಷಾ ಮಾರ್ಗಸೂಚಿಯನ್ವಯ ಕರ್ತವ್ಯ ನಿರ್ವಹಿಸಬೇಕು. ಜಿಲ್ಲೆಯು ಶೈಕ್ಷಣಿಕವಾಗಿ ಮುಂದಿದ್ದು, ಎಲ್ಲಾ ಸವಾಲುಗಳನ್ನು ಎದುರಿಸಿ, ಅದನ್ನು ಮುಂದುವರೆಸಿಕೊಂಡು ಹೋಗುವುದರೊಂದಿಗೆ ಮಕ್ಕಳು ಉತ್ತಮ ರೀತಿಯಲ್ಲಿ ಸಾಧನೆ ಮಾಡುವಂತಾಗಲಿ ಎಂದು ಆಶಿಸಿದರು.
ಸಭೆಯಲ್ಲಿ ಸಹಾಯಕ ಕಮೀಷನರ್ ರಶ್ಮಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಲೋಕೇಶ್ ಸಿ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಬಸವರಾಜ್ ಹುಬ್ಬಳ್ಳಿ, ಡಯಟ್ ಪ್ರಾಂಶುಪಾಲ ಡಾ. ಅಶೋಕ್ ಕಾಮತ್, ಪರೀಕ್ಷಾ ಕೇಂದ್ರದ ಮುಖ್ಯಸ್ಥರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
