ಮೂಡುಬಿದಿರೆ: ಆಯುರ್ವೇದ ಕ್ಷೇತ್ರದಲ್ಲಿ ಇಂದು ಅನೇಕ ಅವಕಾಶಗಳು ಲಭ್ಯವಿದ್ದು, ಅವುಗಳನ್ನು ಸಮರ್ಥವಾಗಿ ಬಳಸಿಕೊಂಡರೆ ಸಾಧನೆ ಸಾಧ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದರು.


ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ 2022–23ನೇ ಸಾಲಿನ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ‘ಸಂಪನ್ನಮ್–2026’ ಉದ್ದೇಶಿಸಿ ಅವರು ಮಾತನಾಡಿದರು.
ಆಯುರ್ವೇದವು ವಿಶ್ವಮಟ್ಟದಲ್ಲಿ ಹೊಸ ಅವಕಾಶಗಳನ್ನು ತೆರೆದಿಟ್ಟಿರುವ ಕ್ಷೇತ್ರವಾಗಿದ್ದು, ವಿದ್ಯಾರ್ಥಿಗಳು ಆಶಾವಾದಿಗಳಾಗಿ ಗುರಿಯೆಡೆಗೆ ಸಾಗಬೇಕು. ವಿದ್ಯಾಭ್ಯಾಸದ ಜೊತೆಗೆ ನಿರಂತರ ಅಭ್ಯಾಸ ಮತ್ತು ಪರಿಶ್ರಮ ಇದ್ದರೆ ಯಾವುದೇ ಕ್ಷೇತ್ರದಲ್ಲೂ ಯಶಸ್ಸು ಸಾಧಿಸಲು ಸಾಧ್ಯ.
ಆಯುರ್ವೇದ, ಯೋಗ, ಪ್ರಕೃತಿ ಚಿಕಿತ್ಸೆ ಸೇರಿದಂತೆ ಹಲವು ವಿಭಾಗಗಳಲ್ಲಿ ಉತ್ತಮ ಬೇಡಿಕೆ ಇದ್ದು, ವಿದ್ಯಾರ್ಥಿಗಳು ಸಂಶೋಧನೆಯ ನೆಲೆಯಲ್ಲಿ ಔಷಧಿ ತಯಾರಿಕೆಯ ಮೂಲಕವೂ ಮುಂದುವರಿಬಹುದು. ಸ್ವದೇಶಿ ಉತ್ಪನ್ನಗಳಿಗೆ ಕೇಂದ್ರ ಸರ್ಕಾರವೂ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು, ಆಯುರ್ವೇದ ಔಷಧಿ ಸಂಬಂಧಿತ ಗಿಡಗಳನ್ನು ಬೆಳೆಸಲು ದೊಡ್ಡ ಮಟ್ಟದ ಅನುದಾನ ನೀಡಲಾಗುತ್ತಿದೆ ಎಂದು ತಿಳಿಸಿದರು.
ಅವಕಾಶಗಳನ್ನು ಬಳಸಿಕೊಳ್ಳುವ ಮನೋಭಾವನೆ ಬೆಳೆಸಿಕೊಳ್ಳಬೇಕು. ಸಾಧನೆಗಾಗಿ ಕೆಲವೊಮ್ಮೆ ತ್ಯಾಗವೂ ಅಗತ್ಯವಾಗುತ್ತದೆ. ತಮ್ಮ ಜೀವನವೂ ಶೂನ್ಯದಿಂದ ಆರಂಭವಾಗಿ ಆಯುರ್ವೇದ ಕ್ಷೇತ್ರಕ್ಕೆ ಕೊಡುಗೆ ನೀಡುವ ಮಟ್ಟಕ್ಕೆ ಬೆಳೆಯಲು ಸಾಧ್ಯವಾಯಿತು ಎಂಬುದನ್ನು ವಿದ್ಯಾರ್ಥಿಗಳು ಅರಿತು ಬದುಕನ್ನು ರೂಪಿಸಿಕೊಳ್ಳಬೇಕು ಎಂದರು.
ಡಾ. ಕೃಷ್ಣಕುಮಾರ್ ಯಾದವ್, ಡಾ. ನೇಹಾನ್ ಮತ್ತು ಡಾ. ಅಶ್ವಿತಾ ತಮ್ಮ ಮೂರು ವರ್ಷದ ಅಧ್ಯಯನ ಅನುಭವಗಳನ್ನು ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ. ಸುಶೀಲ್ ಶೆಟ್ಟಿ, ಆಯುರ್ವೇದ ಕಾಲೇಜಿನ ವೈದ್ಯಕೀಯ ಅಧೀಕ್ಷಕಿ ಡಾ. ಸುರೇಖಾ ಪೈ, ಪದವಿ ವಿಭಾಗದ ಡೀನ್ ಡಾ. ಸ್ವಪ್ನ ಕುಮಾರಿ, ಆತ್ಮ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ. ಸುಬ್ರಹ್ಮಣ್ಯ ಪದ್ಯಾಣ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಡಾ. ಗೀತಾ ಬಿ. ಮಾಕರ್ಂಡೆ ನಿರೂಪಿಸಿ, ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ. ಸುಶೀಲ್ ಶೆಟ್ಟಿ ಸ್ವಾಗತಿಸಿ, ಸ್ನಾತಕೋತ್ತರ ವಿಭಾಗದ ಡೀನ್ ಡಾ. ಮಂಜುನಾಥ ಭಟ್ ವಂದಿಸಿದರು.
