ದೀಪಾವಳಿ ಪ್ರಯುಕ್ತ ಆಳ್ವಾಸ್ ಆಯುರ್ವೇದ ಆಸ್ಪತ್ರೆಯಲ್ಲಿ ಅಭ್ಯಂಗ ಸಪ್ತಾಹ ಶಿಬಿರ ಆರಂಭ

ಮೂಡುಬಿದಿರೆ: ದೀಪಾವಳಿ ಹಬ್ಬದ ಪ್ರಯುಕ್ತ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವಿದ್ಯಾಗಿರಿಯ ಪಂಚಕರ್ಮ ವಿಭಾಗದ ವತಿಯಿಂದ ಆಯೋಜಿಸಿರುವ ಎಂಟು ದಿನಗಳ ‘ಅಭ್ಯಂಗ ಸಪ್ತಾಹ’ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಲಾಯಿತು.

ಆತ್ಮಸಂಶೋಧನಾ ಕೇಂದ್ರದ ನಿರ್ದೇಶಕ ಡಾ. ಸುಬ್ರಹ್ಮಣ್ಯ ಪದ್ಯಾಣ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಆಯುರ್ವೇದದ ಸಾಂಪ್ರದಾಯಿಕ ಚಿಕಿತ್ಸಾ ಪದ್ಧತಿಗಳಲ್ಲಿ ಅಭ್ಯಂಗ ಚಿಕಿತ್ಸೆಗೆ ವಿಶೇಷ ಮಹತ್ವವಿದೆ. ದೇಹ ಮತ್ತು ಮನಸ್ಸಿನ ಆರೋಗ್ಯ ಕಾಪಾಡುವಲ್ಲಿ ಹಾಗೂ ಆರೋಗ್ಯಕರ ಜೀವನಶೈಲಿ ರೂಪಿಸಿಕೊಳ್ಳುವಲ್ಲಿ ಇಂತಹ ಚಿಕಿತ್ಸಾ ವಿಧಾನಗಳು ಸಹಕಾರಿಯಾಗಿವೆ ಎಂದು ತಿಳಿಸಿದರು.
ನವೆಂಬರ್ 7ರಿಂದ 14ರ ವರೆಗೆ ನಡೆಯಲಿರುವ ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಆಯುರ್ವೇದದ ಅಭ್ಯಂಗ ಚಿಕಿತ್ಸೆಯ ಪ್ರಯೋಜನಗಳನ್ನು ಪರಿಚಯಿಸುವ ಉದ್ದೇಶ ಹೊಂದಲಾಗಿದೆ. ಅಭ್ಯಂಗ ಚಿಕಿತ್ಸೆಯು ದೇಹದ ಪೋಷಣೆ, ಚರ್ಮದ ಕಾಂತಿ ವೃದ್ಧಿ, ವಾತ ಸಂಬಂಧಿತ ಸಮಸ್ಯೆಗಳ ಶಮನ ಹಾಗೂ ದೈಹಿಕ ಮತ್ತು ಮಾನಸಿಕ ಒತ್ತಡ ನಿವಾರಣೆಗೆ ಸಹಕಾರಿಯಾಗಿದೆ.

ಶಿಬಿರವು ಪ್ರತಿದಿನ ಬೆಳಿಗ್ಗೆ 7ರಿಂದ ಸಂಜೆ 4ರ ವರೆಗೆ ನಡೆಯಲಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ಪ್ಯಾಕೇಜ್ ದರದಲ್ಲಿ ಚಿಕಿತ್ಸಾ ಸೌಲಭ್ಯ ಕಲ್ಪಿಸಲಾಗಿದೆ. ಆಯುರ್ವೇದದ ಸಾಂಪ್ರದಾಯಿಕ ಚಿಕಿತ್ಸಾ ಪದ್ಧತಿಗಳನ್ನು ಜನಸಾಮಾನ್ಯರಿಗೆ ತಲುಪಿಸುವುದರೊಂದಿಗೆ ದೀಪಾವಳಿಯ ಸಂಭ್ರಮದಲ್ಲಿ ಆರೋಗ್ಯ ಮತ್ತು ಕ್ಷೇಮಕ್ಕೆ ಆದ್ಯತೆ ನೀಡುವ ಆಶಯದೊಂದಿಗೆ ಶಿಬಿರ ಆಯೋಜಿಸಲಾಗಿದೆ.

ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ. ಸುರೇಖಾ ಪೈ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪಂಚಕರ್ಮ ವಿಭಾಗದ ಡಾ. ರೋಹಿಣಿ ಪುರೋಹಿತ್ ಸ್ವಾಗತಿಸಿ, ಡಾ. ವಿಜಯಲಕ್ಷ್ಮಿ ವಂದಿಸಿದರು.

Leave a Reply

Your email address will not be published. Required fields are marked *