ಉಡುಪಿ: ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳಿಗೆ ಮಾತ್ರ ಸೀಮಿತವಾಗದೆ, ಕ್ರೀಡೆ, ಸಾಂಸ್ಕೃತಿಕ ಹಾಗೂ ಇತರ ಸಹಪಠ್ಯ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಸೋಲಿನಿಂದ ಪಾಠ ಕಲಿತು, ತಪ್ಪುಗಳನ್ನು ತಿದ್ದಿಕೊಂಡು ಮುನ್ನಡೆಯುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ (ಪದವಿಪೂರ್ವ) ಜಿಲ್ಲಾ ಉಪನಿರ್ದೇಶಕ ಸತೀಶ್ ನಾಯಕ್ ಅಭಿಪ್ರಾಯಪಟ್ಟರು.

ಅವರು ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು, ಉಡುಪಿಯಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಭಾವಗೀತೆ ಮತ್ತು ಇಂಗ್ಲಿಷ್ ಚರ್ಚಾ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದರು.
ಜೀವನದಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಗೆಲುವು ಸಾಧಿಸಿದಾಗ ಸಂತೋಷಪಡುವಂತೆ, ಸೋಲನ್ನೂ ಸಮಾನ ಮನೋಭಾವದಿಂದ ಸ್ವೀಕರಿಸುವ ಗುಣವನ್ನು ಬೆಳೆಸಿಕೊಳ್ಳಬೇಕು. ಇಂತಹ ಚಟುವಟಿಕೆಗಳು ವಿದ್ಯಾರ್ಥಿಗಳ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸುವುದರ ಜೊತೆಗೆ, ವ್ಯಕ್ತಿತ್ವ ವಿಕಸನಕ್ಕೂ ಸಹಕಾರಿಯಾಗುತ್ತವೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನಲ್ಲಿರುವ ಪ್ರತಿಭೆಯನ್ನು ಗುರುತಿಸಿಕೊಂಡು, ಅದನ್ನು ಬೆಳೆಸಿಕೊಳ್ಳುವ ಮೂಲಕ ಉತ್ತಮ ವ್ಯಕ್ತಿಯಾಗಿ ರೂಪುಗೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಜಗದೀಶ್ ಕುಮಾರ್ ಮಾತನಾಡಿ, ಸ್ಪರ್ಧೆಗಳಲ್ಲಿ ಭಾಗವಹಿಸುವುದು ಮುಖ್ಯವೇ ಹೊರತು ಫಲಿತಾಂಶವಲ್ಲ. ಪ್ರತಿಯೊಂದು ಸ್ಪರ್ಧೆಯೂ ಹೊಸ ಅನುಭವ ಹಾಗೂ ಕಲಿಕೆಗೆ ಅವಕಾಶ ಒದಗಿಸುತ್ತದೆ. ಸಹಪಠ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳ ಆತ್ಮವಿಶ್ವಾಸ, ನಾಯಕತ್ವ ಗುಣ, ಸಮಯಪ್ರಜ್ಞೆ, ಶಿಸ್ತು ಹಾಗೂ ಪರಸ್ಪರ ಸಹಕಾರದ ಮನೋಭಾವ ಬೆಳೆಯುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕಿ ಡಾ. ಉಷಾ ಆಂಗ್ಲ ಭಾಷೆ ಉಪನ್ಯಾಸಕರಾದ ಗಂಗಾಧರ್ ವಿ.ಎ., ಶುಭಗೀತ, ಸ್ವಾತಿ, ಕಾಲೇಜಿನ ಶಿಕ್ಷಣ ಸೇವಾ ಸಮಿತಿಯ ಅಧ್ಯಕ್ಷೆ ಮಲ್ಲಿಕಾ, ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಇಂದಿರಾ, ಕಾಲೇಜಿನ ವಿದ್ಯಾರ್ಥಿ ನಾಯಕಿ ಗ್ರೀಷ್ಮ, ಎನ್.ಎಸ್.ಎಸ್ ನಾಯಕಿ ವಿಜೇತಾ ಹಾಗೂ ತೀರ್ಪುಗಾರರು ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಸಮೀಕ್ಷಾ ಮತ್ತು ಪ್ರಿಯಾಂಕಾ ಪ್ರಾರ್ಥಿಸಿದರು. ಆಂಗ್ಲ ಭಾಷೆ ಉಪನ್ಯಾಸಕಿ ಭವ್ಯಾ ನಾಗರಾಜ್ ನಿರೂಪಿಸಿ, ಗಣಿತಶಾಸ್ತ್ರ ಉಪನ್ಯಾಸಕಿ ಸುಧಾ ಹೆಗಡೆ ವಂದಿಸಿದರು.
ಜಿಲ್ಲೆಯ ವಿವಿಧ ಪದವಿಪೂರ್ವ ಕಾಲೇಜುಗಳಿಂದ ಸ್ಪರ್ಧಿಗಳು ಹಾಗೂ ಉಪನ್ಯಾಸಕರು ಭಾಗವಹಿಸಿದ್ದರು.
