ಉಡುಪಿ: ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ

ಉಡುಪಿ: ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಉಡುಪಿ ಜಿಲ್ಲೆ ಇವರ ವತಿಯಿಂದ 71 ನೇ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವು ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು.
ಕರ್ನಾಟಕ ಸರಕಾರದ ಮಾನ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಅವರು ಧ್ವಜಾರೋಹಣ ನೆರವೇರಿಸಿ, ಕರ್ನಾಟಕ ರಾಜ್ಯೋತ್ಸವದ ಸಂದೇಶ ನೀಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಯಶ್‍ಪಾಲ್ ಎ ಸುವರ್ಣ, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೂ ಮುನ್ನ ಬೋರ್ಡ್ ಹೈಸ್ಕೂಲ್ ನಿಂದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದವರೆಗೆ ನಡೆದ ಭುವನೇಶ್ವರಿ ದೇವಿಯ ಮೆರವಣಿಗೆಗೆ ಬೋರ್ಡ್ ಹೈಸ್ಕೂಲ್ ಆವರಣದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೋಳ್ಳಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು, ಸ್ಥಬ್ದಚಿತ್ರಗಳು ಭಾಗವಹಿಸಿದ್ದವು.

ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಮೆರವಣಿಗೆಯಲ್ಲಿ ಭಾಗವಹಿಸಿದ ಸ್ಥಬ್ದಚಿತ್ರಗಳಲ್ಲಿ ಪ್ರವಾಸೋದ್ಯಮ ಇಲಾಖೆ ಪ್ರಥಮ ಸ್ಥಾನ, ಉಡುಪಿ ನಗರಸಭೆ ದ್ವಿತೀಯ ಸ್ಥಾನ ಹಾಗೂ ಕೃಷಿ ಇಲಾಖೆ ತೃತೀಯ ಸ್ಥಾನ ಪಡೆದಿದೆ.

ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆಯ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಅಂಬಲಪಾಡಿ ಕಿದಿಯೂರು ವಿದ್ಯಾ ಸಮುದ್ರ ಆಂಗ್ಲಮಾಧ್ಯಮ ಶಾಲೆ ಪ್ರಥಮ ಸ್ಥಾನ, ಇಂದ್ರಾಳಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ದ್ವಿತೀಯ ಸ್ಥಾನ, ಕುಂಜಿಬೆಟ್ಟು ಟಿ.ಎ.ಪೈ ಆಂಗ್ಲ ಮಾಧ್ಯಮ ಪ್ರೌಢಶಾಲೆ ತೃತೀಯ ಸ್ಥಾನ ಹಾಗೂ ಮಲ್ಪೆ ನಾರಾಯಣ ಗುರು ಆಂಗ್ಲಮಾಧ್ಯಮ ಪ್ರೌಢಶಾಲೆ ಮತ್ತು ಅಲೆವೂರು ಶಾಂತಿ ನಿಕೇತನ ಆಂಗ್ಲಮಾಧ್ಯಮ ಶಾಲೆ ಸಮಾಧಾನಕರ ಬಹುಮಾನ ತಮ್ಮದಾಗಿಸಿಕೊಂಡವು.

ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಡೆದ ಪಥ ಸಂಚಲನದಲ್ಲಿ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಪಿ.ಎಂ.ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಳತ್ತೂರು ಸಂತೆಕಟ್ಟೆ ಪ್ರಥಮ ಹಾಗೂ ಒಳಕಾಡು ಸರಕಾರಿ ಪ್ರಾಥಮಿಕ ಶಾಲೆ (ಸೇವಾದಳ) ದ್ವಿತೀಯ ಸ್ಥಾನ, ಪ್ರೌಢಶಾಲಾ ವಿಭಾಗದಲ್ಲಿ ಕಡಿಯಾಳಿ ಯು.ಕಮಲಾಬಾಯಿ ಪ್ರೌಢಶಾಲೆ ಎನ್.ಸಿ.ಸಿ ನೇವಿ ಪ್ರಥಮ, ಮಣಿಪಾಲ ಮಾಧವ ಕೃಪ ಪ್ರೌಢಶಾಲೆ ಎನ್.ಸಿ.ಸಿ ಆರ್ಮಿ ದ್ವಿತೀಯ ಹಾಗೂ ಕುಂಜಾರುಗಿರಿ ಆನಂದತೀರ್ಥ ವಿದ್ಯಾಲಯ ಪ್ರೌಢಶಾಲೆ ಎನ್.ಸಿ.ಸಿ ಆರ್ಮಿ ತೃತೀಯ ಸ್ಥಾನ ಪಡೆಯಿತು. ಕಾಲೇಜು ವಿಭಾಗದಲ್ಲಿ ಕುಂಜಿಬೆಟ್ಟು ಮಹಾತ್ಮಗಾಂಧಿ ಮೆಮೋರಿಯಲ್ ಕಾಲೇಜು ಎನ್.ಸಿ.ಸಿ ನೇವಿ ಪ್ರಥಮ, ಉಡುಪಿಯ ಪೂರ್ಣಪ್ರಜ್ಞ ಕಾಲೇಜು ಎನ್.ಸಿ.ಸಿ ನೇವಿ ದ್ವಿತೀಯ ಹಾಗೂ ಉಡುಪಿಯ ಪೂರ್ಣಪ್ರಜ್ಞ ಕಾಲೇಜು ಎನ್.ಸಿ.ಸಿ ಆರ್ಮಿ ತೃತೀಯ ಸ್ಥಾನ ಪಡೆಯಿತು

ಶೈಕ್ಷಣಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಉಡುಪಿ ಜಿಲ್ಲೆ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಸಾಕ್ಷರತೆ ಹೊಂದಿರುವ ಹಿನ್ನೆಲೆ, ಉಡುಪಿ ಜಿಲ್ಲೆಯನ್ನು ಸಂಪೂರ್ಣ ಸಾಕ್ಷರತಾ ಜಿಲ್ಲೆಯೆಂದು ಘೋಷಿಸಿದರು.

ಕಾರ್ಯಕ್ರಮಕ್ಕೂ ಮುನ್ನ ನಗರ ಪ್ರದೇಶದ ಶಾಲಾ ಹಾಗೂ ಕಾಲೇಜಿನ ವಿದ್ಯಾರ್ಥಿಗಳಿಗೆ ಗ್ರಾಮೀಣ ಜೀವನದ ನೈಜ ಅನುಭವ, ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಕಲೆ ಹಾಗೂ ಸಂಸ್ಕೃತಿಯ ಕುರಿತು ಪ್ರಾಯೋಗಿಕ ಅರಿವನ್ನು ಒದಗಿಸುವ ಸಲುವಾಗಿ, “ಗ್ರಾಮಾನುಭವ” ಎಂಬ ಮಹತ್ತರ ಕಾರ್ಯಕ್ರಮಕ್ಕೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಅವರು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ಚಾಲನೆ ನೀಡಿದರು.

Leave a Reply

Your email address will not be published. Required fields are marked *