ಪರಶುರಾಮ ಥೀಮ್ ಪಾರ್ಕ್ ವಿಚಾರ: ಕಾರ್ಕಳದಲ್ಲಿ ಬಿಜೆಪಿ–ಕಾಂಗ್ರೆಸ್ ಜಟಾಪಟಿ; ಪೋಸ್ಟರ್ ಅಭಿಯಾನಕ್ಕೆ ಪೊಲೀಸರ ತಡೆ

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ವಿಚಾರವಾಗಿ ಕಾರ್ಕಳದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ರಾಜಕೀಯ ಜಟಾಪಟಿ ತೀವ್ರಗೊಂಡಿದ್ದು, ಶಾಸಕ ವಿ. ಸುನಿಲ್ ಕುಮಾರ್ ಅವರ ಮನೆ ಹಾಗೂ ಕಚೇರಿ ಸುತ್ತಮುತ್ತ ಬುಧವಾರ ಬಿಗುವಿನ ವಾತಾವರಣ ನಿರ್ಮಾಣವಾಯಿತು.

ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿದ್ದು, ನಕಲಿ ಪರಶುರಾಮನ ಪ್ರತಿಮೆ ನಿರ್ಮಿಸಲಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಶಾಸಕ ಸುನಿಲ್ ಕುಮಾರ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪೋಸ್ಟರ್ ಅಭಿಯಾನ ಆರಂಭಿಸಲು ಮುಂದಾಯಿತು. ಕಾಂಗ್ರೆಸ್ ಕಚೇರಿಯಿಂದ ಕಾರ್ಯಕರ್ತರು ಶಾಸಕರ ವಿರುದ್ಧದ ಫ್ಲೆಕ್ಸ್ ಹಾಗೂ ಪೋಸ್ಟರ್‌ಗಳನ್ನು ಹಿಡಿದು ಘೋಷಣೆ ಕೂಗುತ್ತಾ ಅವರ ಮನೆಗೆ ತೆರಳಲು ಮುಂದಾದರು.

ಈ ವೇಳೆ ಮುನ್ನೆಚ್ಚರಿಕಾ ಕ್ರಮವಾಗಿ ಸರ್ವಜ್ಞ ವೃತ್ತದ ಬಳಿ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ತಡೆದು ವಶಕ್ಕೆ ಪಡೆದರು. ಇದನ್ನು ವಿರೋಧಿಸಿದ ಕಾರ್ಯಕರ್ತರು ರಸ್ತೆಯಲ್ಲೇ ಪ್ರತಿಭಟನೆ ನಡೆಸಿ, ಸುನಿಲ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಘೋಷಣೆ ಕೂಗಿದರು. ಪೋಸ್ಟರ್ ಅಭಿಯಾನವನ್ನು ಮುಂದಿನ ದಿನಗಳಲ್ಲಿಯೂ ಮುಂದುವರಿಸುವುದಾಗಿ ಕಾಂಗ್ರೆಸ್ ಕಾರ್ಯಕರ್ತರು ತಿಳಿಸಿದ್ದಾರೆ.

ಈ ಹಿಂದೆ ಕಾಂಗ್ರೆಸ್ ಮುಖಂಡ ಶುಭದ ರಾವ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪರಶುರಾಮ ಥೀಮ್ ಪಾರ್ಕ್‌ನಲ್ಲಿ ನಕಲಿ ಪ್ರತಿಮೆ ನಿರ್ಮಿಸಿ ಭ್ರಷ್ಟಾಚಾರ ನಡೆಸಿದ್ದಾರೆ, ಶಾಸಕ ಸುನಿಲ್ ಕುಮಾರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದರು. ಇದೇ ವಿಚಾರವನ್ನು ಗ್ರಾಮ ಮಟ್ಟಕ್ಕೆ ಕೊಂಡೊಯ್ಯುವ ಮೂಲಕ ಅಭಿಯಾನ ನಡೆಸುವುದಾಗಿ ಅವರು ತಿಳಿಸಿದ್ದರು.

ಈ ಹಿನ್ನೆಲೆಯಲ್ಲಿ ಪೊಲೀಸರು ಕಳೆದ ಎರಡು ದಿನಗಳಿಂದ ಶಾಸಕ ಸುನಿಲ್ ಕುಮಾರ್ ಅವರ ಮನೆ ಹಾಗೂ ಕಚೇರಿ ಬಳಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು. ಕಾಂಗ್ರೆಸ್‌ನ ಅಭಿಯಾನಕ್ಕೆ ಪ್ರತಿರೋಧ ವ್ಯಕ್ತಪಡಿಸಲು ಬಿಜೆಪಿ ಕಾರ್ಯಕರ್ತರೂ ಶಾಸಕನ ಮನೆ, ಕಚೇರಿ ಹಾಗೂ ಬಿಜೆಪಿ ಕಚೇರಿ ಬಳಿ ಜಮಾವಣೆಗೊಂಡಿದ್ದರು. ವಿವಿಧೆಡೆಗಳಿಂದ ಕಾರ್ಯಕರ್ತರು ಆಗಮಿಸಿದ್ದರಿಂದ ಪರಿಸ್ಥಿತಿ ಬಿಗಡಾಯಿಸದಂತೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿತ್ತು.

ಈ ನಡುವೆ ಬಿಜೆಪಿ ಮುಖಂಡ ಮುಟ್ಲುವಾಡಿ ಸತೀಶ್ ಶೆಟ್ಟಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿ, ಶಾಸಕ ಸುನಿಲ್ ಕುಮಾರ್ ಅವರ ಮನೆಗೆ ಪೋಸ್ಟರ್ ಅಂಟಿಸುವ ಅಭಿಯಾನ ನಡೆಸುತ್ತಿರುವ ಕಾಂಗ್ರೆಸ್ ನಾಯಕರು ರಣಹೆಡಿಗಳಂತೆ ವರ್ತಿಸುತ್ತಿದ್ದಾರೆ ಎಂದು ಟೀಕಿಸಿದರು.

ಪರಶುರಾಮ ಥೀಮ್ ಪಾರ್ಕ್ ವಿಚಾರದಲ್ಲಿ ಸುನಿಲ್ ಕುಮಾರ್ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ ಹಾಗೂ ಅವರು ಆರೋಪಿಯಲ್ಲ. ಆದರೂ ಕಾಂಗ್ರೆಸ್ ಸುಳ್ಳು ಆರೋಪ ಮತ್ತು ಅಪಪ್ರಚಾರ ನಡೆಸುತ್ತಿದೆ ಎಂದು ಅವರು ಆರೋಪಿಸಿದರು. ಸುಳ್ಳು ಸುದ್ದಿ ಹರಡುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ ಅವರು, ಇಂತಹ ಘಟನೆಗಳು ಮರುಕಳಿಸಿದರೆ ತಕ್ಕ ಉತ್ತರ ನೀಡಲಾಗುವುದು ಎಂದು ಎಚ್ಚರಿಸಿದರು.

ಈ ಸಂಬಂಧ ಬಿಜೆಪಿ ಮುಖಂಡರು ಕಾರ್ಕಳ ಎಸ್ಪಿ ಹಾಗೂ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

Leave a Reply

Your email address will not be published. Required fields are marked *