ಶಾಲಾ ಆವರಣದಲ್ಲಿ ರಾಜಕೀಯ ಭಾಷಣ ಮತ್ತು ಮಕ್ಕಳ ದುರ್ಬಳಕೆ ಅತ್ಯಂತ ಖಂಡನೀಯ- ಪದ್ಮರಾಜ್ ಆರ್. ಪೂಜಾರಿ ಆಕ್ರೋಶ

ಮಂಗಳೂರು: ಬೆಳ್ತಂಗಡಿಯ ಪೂಂಜಾಲಕಟ್ಟೆಯ ಸರ್ಕಾರಿ ಶಾಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಶಾಸಕ ಹರೀಶ್ ಪೂಂಜಾ ಅವರು ರಾಜಕೀಯ ಪ್ರೇರಿತ ಭಾಷಣ ಮಾಡಿರುವುದು ಮತ್ತು ಶಾಲಾ ಮಕ್ಕಳಿಂದ ರಾಜಕೀಯ ಘೋಷಣೆಗಳನ್ನು ಕೂಗಿಸಿರುವುದನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ತೀವ್ರವಾಗಿ ಖಂಡಿಸಿದ್ದಾರೆ.

​ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಶಾಲೆಗಳು ಜ್ಞಾನ ದೇಗುಲಗಳಾಗಿದ್ದು, ಮಕ್ಕಳ ಭವಿಷ್ಯವನ್ನು ರೂಪಿಸುವ ಪವಿತ್ರ ಸ್ಥಳಗಳಾಗಿವೆ. ಆದರೆ, ಪೂಂಜಾಲಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕರು ಕಾಂಗ್ರೆಸ್ ಪಕ್ಷದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವುದು ಮತ್ತು ಮುಗ್ಧ ಶಾಲಾ ಮಕ್ಕಳನ್ನು ರಾಜಕೀಯಕ್ಕೆ ಬಳಸಿಕೊಂಡಿರುವುದು ಪ್ರಜಾಪ್ರಭುತ್ವ ಮತ್ತು ಶಿಕ್ಷಣ ವ್ಯವಸ್ಥೆಗೆ ಮಾಡಿದ ಅಪಮಾನವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

​”ರಾಜ್ಯ ಸರ್ಕಾರದ ಅನುದಾನದಲ್ಲಿ ನಿರ್ಮಾಣವಾದ ಸಭಾಭವನದ ಉದ್ಘಾಟನೆಗೆ ಶಿಷ್ಟಾಚಾರ ಉಲ್ಲಂಘಿಸಿ ಮುಂದಾಗಿದ್ದನ್ನು ಪ್ರಶ್ನಿಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ದೂರು ನೀಡಲಾಗಿತ್ತು. ಆ ಕಾರ್ಯಕ್ರಮ ರದ್ದಾದ ಹಿನ್ನೆಲೆಯಲ್ಲಿ, ಖಾಸಗಿ ಸಂಸ್ಥೆಗೆ ಅಭಿನಂದನೆ ಸಲ್ಲಿಸುವ ನೆಪದಲ್ಲಿ ಶಾಲಾ ವೇದಿಕೆಯನ್ನು ರಾಜಕೀಯ ಭಾಷಣಕ್ಕೆ ಬಳಸಿಕೊಳ್ಳಲಾಗಿದೆ. ಅಲ್ಲದೆ, ಮಕ್ಕಳಿಂದ ರಾಜಕೀಯ ನಾಯಕರ ಪರವಾಗಿ ಜಯಕಾರ ಹಾಕಿಸಿರುವುದು ಶಿಕ್ಷಣ ಇಲಾಖೆಯ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ” ಎಂದು ಅವರು ತಿಳಿಸಿದ್ದಾರೆ.

​ಶೈಕ್ಷಣಿಕ ಸಂಸ್ಥೆಗಳ ಪಾವಿತ್ರ್ಯತೆಯನ್ನು ಹಾಳುಮಾಡುವ ಇಂತಹ ಬೆಳವಣಿಗೆಗಳನ್ನು ನಾಗರಿಕ ಸಮಾಜ ಎಂದಿಗೂ ಸಹಿಸುವುದಿಲ್ಲ. ಶಾಲಾ ಮಕ್ಕಳ ಮನಸ್ಸಿನಲ್ಲಿ ರಾಜಕೀಯ ವಿಷಬೀಜ ಬಿತ್ತುವ ಇಂತಹ ಪ್ರವೃತ್ತಿಯ ವಿರುದ್ಧ ಶಿಕ್ಷಣ ಇಲಾಖೆಯು ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪದ್ಮರಾಜ್ ಆರ್. ಪೂಜಾರಿ ಅವರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *