ಕಾರ್ಕಳ: ಐತಿಹಾಸಿಕ ಕಾರ್ಕಳ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಅಗತ್ಯ ಸಿದ್ಧತೆಗಳನ್ನು ಈಗಿನಿಂದಲೇ ಕೈಗೊಳ್ಳಬೇಕು ಎಂದು ಶಾಸಕ ಸುನೀಲ್ ಕುಮಾರ್ ಸೂಚಿಸಿದರು.

ಸೋಮವಾರ ತಾ.ಪಂ. ಸಭಾಂಗಣದಲ್ಲಿ ನಡೆದ ಸರ್ಕಾರಿ ಮಟ್ಟದ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು.
ಮಹೋತ್ಸವದ ಸಂದರ್ಭದಲ್ಲಿ ಕಾರ್ಕಳ ನಗರದಲ್ಲಿ ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಸಂಚಾರ ವ್ಯವಸ್ಥೆಗೆ ವಿಶೇಷ ಯೋಜನೆ ರೂಪಿಸಬೇಕು. ಬಸ್ ಸಂಚಾರ, ಬಸ್ ನಿಲ್ದಾಣ ಹಾಗೂ ಪ್ರಮುಖ ರಸ್ತೆ ಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳಬೇಕು. ಪಾರ್ಕಿಂಗ್ ಸ್ಥಳಗಳನ್ನು ಗುರುತಿಸಿ ಪೊಲೀಸ್, ಲೋಕೋಪಯೋಗಿ ಇಲಾಖೆ ಹಾಗೂ ಪುರಸಭೆ ಜಂಟಿಯಾಗಿ ಕಾರ್ಯನಿರ್ವಹಿಸಬೇಕು. ಕೇಂದ್ರ ಗೃಹ ಸಚಿವರು ಹಾಗೂ ರಾಜ್ಯದ ಮುಖ್ಯಮಂತ್ರಿ ಆಗಮಿಸುವ ಸಾಧ್ಯತೆಯಿರುವುದರಿಂದ ಭದ್ರತೆ ಮತ್ತು ಪಾರ್ಕಿಂಗ್ ವ್ಯವಸ್ಥೆಗೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು.
ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸ್ವಚ್ಛತೆಗೆ ಪುರಸಭೆಯಿಂದ ಸುಮಾರು 100 ತಾತ್ಕಾಲಿಕ ಕಾರ್ಮಿಕ ರನ್ನು ನಿಯೋಜಿಸಬೇಕು. ಎಸ್‌ಎಲ್‌ಆರ್‌ಎಂ ಘಟಕ ಹಾಗೂ ಗ್ರಾಮ ಪಂಚಾಯತ್‌ಗಳ ಸಹಕಾರ ಪಡೆಯಬೇಕು. ಸುಮಾರು 110 ತಾತ್ಕಾಲಿಕ ಶೌಚಾಲಯಗಳನ್ನು ನಿರ್ಮಿಸಿ ನಿರಂತರ ಸ್ವಚ್ಛತೆ ಮತ್ತು ನಿರ್ವಹಣೆಗೆ ವ್ಯವಸ್ಥೆ ಕಲ್ಪಿಸಬೇಕು ಎಂದರು.
ಭಕ್ತರಿಗೆ ನಿರಂತರ ಕುಡಿಯುವ ನೀರು ಪೂರೈಸಲು ಮುಂಡ್ಲಿಯಿಂದ ನೀರು ತರುವ ಕಾಮಗಾರಿ ಪೂರ್ಣಗೊಳಿಸ ಬೇಕು. ಆರು ಖಾಸಗಿ ಬಾವಿಗಳ ನೀರನ್ನೂ ಬಳಸಿಕೊಳ್ಳಬೇಕು. ಪಾರ್ಕಿಂಗ್ ಹಾಗೂ ಜನಸಂದಣಿ ಪ್ರದೇಶಗಳಲ್ಲಿ 5 ಸಾವಿರದಿಂದ 15 ಸಾವಿರ ಲೀಟರ್ ಸಾಮರ್ಥ್ಯದ ತಾತ್ಕಾಲಿಕ ನೀರಿನ ಟ್ಯಾಂಕ್‌ಗಳನ್ನು ಅಳವಡಿಸುವ ಬಗ್ಗೆ ಪರಿಶೀಲಿಸಬೇಕು. ಪುರಸಭೆ ಹಾಗೂ ಇಬ್ಬರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ನೀರಿನ ವ್ಯವಸ್ಥೆಯ ಜವಾಬ್ದಾರಿ ವಹಿಸಬೇಕು ಎಂದು ತಿಳಿಸಿದರು.
ಆರೋಗ್ಯ ಇಲಾಖೆಯಿಂದ ಎರಡು ಆರೋಗ್ಯ ಶಿಬಿರಗಳನ್ನು ಸ್ಥಾಪಿಸಿ, ಐದು ಆಂಬುಲೆನ್ಸ್‌ಗಳನ್ನು ಸಿದ್ಧವಾಗಿಡಬೇಕು. ಮೂರು ಪಾಳಿಗಳಲ್ಲಿ ಸಿಬ್ಬಂದಿ ನಿಯೋಜಿಸಿ 24 ಗಂಟೆಯೂ ಪ್ರಾಥಮಿಕ ಚಿಕಿತ್ಸೆ ಮತ್ತು ಆರೋಗ್ಯ ಸೇವೆ ಒದಗಿಸ ಬೇಕು. ಅಗ್ನಿಶಾಮಕ ಇಲಾಖೆಯಿಂದ ಬೆಂಗಳೂರಿನಿಂದ ಹೆಚ್ಚುವರಿ ನಾಲ್ಕು ವಾಹನಗಳನ್ನು ತರಿಸಿಕೊಳ್ಳಬೇಕು. ತುರ್ತು ಸಂದರ್ಭಗಳನ್ನು ಎದುರಿಸಲು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.
ಮಹೋತ್ಸವದ ಪ್ರಮುಖ ದಿನಗಳಾದ 24, 25 ಮತ್ತು 26ರಂದು ಶಾಲೆಗಳಿಗೆ ರಜೆ ನೀಡುವ ಸಾಧ್ಯತೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪರಿಶೀಲಿಸಬೇಕು. ಶಾಲಾ-ಕಾಲೇಜುಗಳ ಸಹಕಾರದೊಂದಿಗೆ ಮಕ್ಕಳ ಕಾರ್ಯಕ್ರಮ ಗಳಿಗೆ ಸಿದ್ಧತೆ ಮಾಡಿಕೊಳ್ಳಬೇಕು. ತೋಟಗಾರಿಕೆ ಹಾಗೂ ಅರಣ್ಯ ಇಲಾಖೆಗಳು ವಸ್ತುಪ್ರದರ್ಶನ ಆಯೋಜಿಸ ಬೇಕು. ಮೆಸ್ಕಾಂನ ನಿಟ್ಟೆ ಮತ್ತು ಕಾರ್ಕಳ ವಿಭಾಗದ ಎಇಇಗಳು ಜಂಟಿಯಾಗಿ ಬೀದಿದೀಪ ಹಾಗೂ ವಿದ್ಯುತ್ ವ್ಯವಸ್ಥೆ ಪರಿಶೀಲಿಸಬೇಕು ಎಂದರು.
ಪ್ರತಿಯೊಂದು ಇಲಾಖೆಯೂ ಪ್ರತ್ಯೇಕವಾಗಿ ಸಿದ್ಧತೆ ಪರಿಶೀಲಿಸಿ, ವಾರಕ್ಕೊಮ್ಮೆ ಎಲ್ಲ ಇಲಾಖೆಗಳ ಸಮನ್ವಯ ಸಭೆ ನಡೆಸಬೇಕು. ಮುಂದಿನ ಸಭೆಗೆ ಅಧಿಕಾರಿಗಳು ತಮ್ಮ ಇಲಾಖೆಯ ಕಾರ್ಯಯೋಜನೆ ಹಾಗೂ ಸಿದ್ಧತೆಗಳ ವಿವರ ದೊಂದಿಗೆ ಹಾಜರಾಗಬೇಕು. ಯಾವುದೇ ಹಂತದಲ್ಲಿ ಸಮನ್ವಯದ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಮಹಾಮಸ್ತಕಾಭಿಷೇಕ ಸಮಿತಿ ಕಾರ್ಯಾಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಮಾತನಾಡಿ, 12 ವರ್ಷಗಳಿಗೊಮ್ಮೆ ನಡೆಯುವ ಈ ಐತಿಹಾಸಿಕ ಮಹೋತ್ಸವವನ್ನು ಯಶಸ್ವಿಗೊಳಿಸಲು ಸರಕಾರ, ಜಿಲ್ಲಾಡಳಿತ, ವಿವಿಧ ಇಲಾಖೆಗಳು ಹಾಗೂ ಸಾರ್ವಜನಿಕರ ಸಹಕಾರ ಅತ್ಯಗತ್ಯ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವುದ ರಿಂದ ಪ್ರತಿಯೊಂದು ಇಲಾಖೆಯೂ ತನ್ನ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಎಲ್ಲ ವ್ಯವಸ್ಥೆಗಳನ್ನು ಮುಂಚಿತವಾಗಿಯೇ ಸಿದ್ಧಪಡಿಸಿ, ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಮಹೋತ್ಸವವನ್ನು ಅಚ್ಚುಕಟ್ಟಾಗಿ ನಡೆಸಲು ಎಲ್ಲರೂ ಕೈಜೋಡಿಸಬೇಕು ಎಂದರು.
ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಮಾತನಾಡಿ, ಮಹೋತ್ಸವ ಆರಂಭಕ್ಕೂ ಮುನ್ನ ಎಲ್ಲ ಮೂಲಸೌಕರ್ಯ ಹಾಗೂ ಅಗತ್ಯ ವ್ಯವಸ್ಥೆಗಳನ್ನು ಸಿದ್ಧಪಡಿಸಬೇಕು. ಪ್ರತಿಯೊಂದು ಇಲಾಖೆಯೂ ತನ್ನ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾತನಾಡಿ, ಮಹೋತ್ಸವದ ಸಂದರ್ಭದಲ್ಲಿ ಸಂಚಾರ ನಿಯಂತ್ರಣ ದೊಡ್ಡ ಸವಾಲಾಗಲಿದ್ದು, ನಾಲ್ಕು ಜಿಲ್ಲೆಗಳ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲು ಯೋಜನೆ ರೂಪಿಸಲಾಗುವುದು ಎಂದರು.
ಸಭೆಯಲ್ಲಿ ಮಹಾಮಸ್ತಕಾಭಿಷೇಕ ಸಮಿತಿ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಜೈನ್, ಸಹಾಯಕ ಆಯುಕ್ತ ಮಹೇಶ್ ಎಸ್., ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಇಶಿತಾ ಗುಪ್ತ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮಹಾಮಸ್ತಕಾಭಿಷೇಕ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆಯ ನಿಲಯ ಮೇಲ್ವಿಚಾರಕಿ ಚೇತನಾ ಶೆಟ್ಟಿ ಸ್ವಾಗತಿಸಿ, ನಿರೂಪಿಸಿದರು.
ಮಹಾ ಮಸ್ತಕಾಭಿಷೇಕ ಮಹೋತ್ಸವದ ಪೂರ್ವಸಿದ್ಧತೆ ಪರಿಶೀಲನೆ ಸಭೆಯ ಅನಂತರ ಶಾಸಕರು, ಸಮಿತಿ ಪದಾಧಿಕಾರಿಗಳ ತಂಡ ಗೊಮ್ಮಟ ಬೆಟ್ಟ ಇತರೆ ಸ್ಥಳಗಳಿಗೆ ಭೇಟಿ ನೀಡಿ ಚರ್ಚಿಸಿ, ಸ್ಥಳ ಪರಿಶೀಲನೆ ನಡೆಸಿದರು. ಒಟ್ಟಾರೆ ಮಸ್ತಕಾಭಿಷೇಕ ಮಹೋತ್ಸವ ಸ್ಥಳದ ಕಾರ್ಯದ ಕ್ರಮಗಳ ಆಯೋಜನೆ ಬಗ್ಗೆ ಶಾಸಕ ಸುನಿಲ್ ಕುಮಾರ್, ಸಮಿತಿ ಕಾರ್ಯಾಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ನಡುವೆ ವಿಸ್ತ್ರತ ಚರ್ಚೆ ನಡೆಯಿತು.
ಸಮಿತಿ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಜೈನ್, ಸಹಾಯಕ ಆಯುಕ್ತ ಮಹೇಶ್ ಎಸ್., ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಇಶಿತಾ ಗುಪ್ತ ಸೇರಿದಂತೆ ಅಧಿಕಾರಿಗಳ ತಂಡ ಗೊಮ್ಮಟಬೆಟ್ಟ ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
