ಉಡುಪಿ: ಮಕ್ಕಳ ರಕ್ಷಣೆಗಾಗಿಯೇ ಅನುಷ್ಠಾನಗೊಳಿಸಲಾದ ಕಾಯಿದೆ ಹಾಗೂ ಕಾರ್ಯಕ್ರಮಗಳಲ್ಲಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರುಗಳು ತಮಗಿರುವ ಸಾಮಾಜಿಕ ಹೊಣೆಗಾರಿಕೆಯನ್ನು ಮನಗಂಡು,ಅವುಗಳನ್ನು ತಳ ಹಂತದಿಂದಲೇ ಅನುಷ್ಠಾನ ಮಾಡಲು ಮುಂದಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮನು ಪಟೇಲ್ ಹೇಳಿದರು.

ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಗ್ರಾಮ ಮಟ್ಟದಲ್ಲಿ ರಕ್ಷಣಾ ಸಮಿತಿಗಳನ್ನು ಬಲವರ್ಧನೆ ಗೊಳಿಸುವ ಹಾಗೂ ಮಕ್ಕಳ ರಕ್ಷಣೆಯ ಕುರಿತ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಮಕ್ಕಳ ಸಂರಕ್ಷಣೆಯ ವಿಶೇಷ ಕಾಯ್ದೆಗಳಾದ ಪೋಕ್ಸೋ, ಉಚಿತ ಮತ್ತು ಕಡ್ಡಾಯ ಶಿಕ್ಷಣ, ಬಾಲ್ಯ ವಿವಾಹ ನಿಷೇಧ, ಭೀಕ್ಷಾಟನೆ, ಬಾಲ ಕಾರ್ಮಿಕ ಪದ್ಧತಿ ನಿಷೇಧ, ಹೆಣ್ಣು ಭ್ರೂಣ ಹತ್ಯೆ, ಭ್ರೂಣ ಪತ್ತೆ ನಿಷೇಧ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ಗ್ರಾಮ ಮಟ್ಟದ ಸಮಿತಿಯ ಉದ್ದೇಶಗಳನ್ನು ಅರ್ಥೈಸಿಕೊಂಡು ಆಶಾ ಹಾಗೂ ಅಂಗನವಾಡಿ ಕಾರ್ಯ ಕರ್ತೆಯರು ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದರು.
ಮಕ್ಕಳ ಸುರಕ್ಷತೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಮಕ್ಕಳ ರಕ್ಷಣೆಗೆ ಸಂಬಂಧಿದ ಯಾವುದೇ ಕಾಯಿದೆಗಳನ್ನು ಅನುಷ್ಠಾನ ಮಾಡುವಾಗ ಯಾವುದೇ ನಿರ್ಲಕ್ಷ್ಯ ತೋರದೆ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು ಎಂದ ಅವರು, ಕಾರ್ಯಾಗಾರದಲ್ಲಿ ಮಕ್ಕಳ ರಕ್ಷಣೆಗೆ ಸಂಬಂದಿಸಿದನಂತೆ ಯಾವುದೇ ಗೊಂದಲಗಳಿದ್ದಲ್ಲಿ ಸಂಪನ್ಮೂಲ ವ್ಯಕ್ತಿಗಳೊಂದಿಗೆ ಮುಕ್ತವಾಗಿ ಹಂಚಿಕೊಂಡು ಪರಿಹಾರ ಕಂಡುಕೊಳುವಂತೆ ಸಲಹೆ ನೀಡಿದರು.
ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ್ ಜಿ ಹುಬ್ಬಳ್ಳಿ ಮಾತನಾಡಿ, ಸಮಾಜದಲ್ಲಿ ಮಾನವೀಯ ನೆಲೆಗಳನ್ನು ರೂಪುಗೊಳ್ಳುವಂತೆ ಮಾಡಬೇಕು. ಮಕ್ಕಳಿಗೆ ಸಂಬಂದಿಸಿದ ರಕ್ಷಣಾ ಕೆಲಸಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು. ಅಂಗನವಾಡಿ ಗೆ ಬರುವ ಮಕ್ಕಳ ಪೋಷಕರಿಗೆ ಮಕ್ಕಳ ರಕ್ಷಣೆಗೆ ಸಂಬಂದಿಸಿದ ರಕ್ಷಣಾ ನೀತಿಗಳ ಬಗ್ಗೆ ಮಾಹಿತಿ ನೀಡಬೇಕು. ಸಂಕಷ್ಟದಲ್ಲಿರುವ ಯಾವ ಮಗುವು ರಕ್ಷಣೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಅನುರಾಧ ಹಾದಿಮನಿ ಮಾತನಾಡಿ, ಸಮಾಜದಲ್ಲಿರುವ ಪ್ರತಿಯೊಂದು ಮಗುವಿನ ಬಗ್ಗೆ ಕಾಳಜಿ ವಹಿಸುವುದರೊಂದಿಗೆ ಅವರುಗಳು ತಮ್ಮ ಮೂಲಭೂತ ಹಕ್ಕುಗಳಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದರು.
ಮಕ್ಕಳ ಸಂರಕ್ಷಣಾ ಯೋಜನೆ ಯೂನಿಸೆಫ್ ಕೊಪ್ಪಳ ಪ್ರಾದೇಶಿಕ ಸಂಯೋಜಕ ಡಾ. ಕೊಣಿಲ ರಾಘವೇಂದ್ರ ಭಟ್, ಆಶಾ ಹಾಗೂ ಅಂಗನವಾಡಿ ಕಾರ್ಯ ಕರ್ತರುಗಳಿಗೆ, ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಗ್ರಾಮ ಮಟ್ಟದಲ್ಲಿ ರಕ್ಷಣಾ ಸಮಿತಿಗಳನ್ನು ಬಲವರ್ಧನೆ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಜೂಹಿ ದಾಮೋದರ್, ಅಂಗನವಾಡಿ ಮೇಲ್ವಿಚಾರಕರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್ ಸ್ವಾಗತಿಸಿ, ಸುರಕ್ಷಾ ನಿರೂಪಿಸಿ ವಂದಿಸಿದರು.
