ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ, ಉಚಿತ ಮಧ್ಯಾಹ್ನದ ಬಿಸಿ ಊಟ ಯೋಜನೆಗೆ ಚಾಲನೆ

ಮೂಡುಬಿದಿರೆ: ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಉಚಿತ ಮಧ್ಯಾಹ್ನದ ಬಿಸಿ ಊಟ ಯೋಜನೆಗೆ ಸೋಮವಾರ (ಜು. 6) ಚಾಲನೆ ನೀಡಲಾಯಿತು.

ಕಾಲೇಜಿನ ಸ್ಥಾಪಕ ಅಧ್ಯಕ್ಷರಾದ ಪ.ಪೂ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯವರ್ಯ ಸ್ವಾಮೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವೃಂದಾ ರಾಜೇಂದ್ರ ಚೌಟ (ಅರಮನೆ) ಅವರು ದೀಪ ಬೆಳಗುವ ಮೂಲಕ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ, ಮಧ್ಯಾಹ್ನದ ಉಚಿತ ಬಿಸಿ ಊಟ ಯೋಜನೆಗೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ವಕೀಲೆ ಶ್ವೇತಾ ಜೈನ್, ವೀಣಾ ರಘುಚಂದ್ರ, ಮಂಜುಳಾ ಅಭಯಚಂದ್ರ ಜೈನ್,  ಶಿಲ್ಪಾ (ಮುಖ್ಯ ಅಭಿಯಂತರರು, ಪುರಸಭೆ) ಹಾಗೂ ಸಂಜಯಂತ್ ಕುಮಾರ್ ಶೆಟ್ಟಿ ಅತಿಥಿಗಳಾಗಿ ಭಾಗವಹಿಸಿದ್ದರು.

ಅಧ್ಯಕ್ಷೀಯ ಆಶೀರ್ವಚನ ನೀಡಿದ ಸ್ವಾಮೀಜಿಯವರು, ಕಾಲೇಜಿನ ಬಹುತೇಕ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರಾಗಿದ್ದು, ಅವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಳೆದ 12 ವರ್ಷಗಳಿಂದ ದಾನಿಗಳ ಸಹಕಾರದೊಂದಿಗೆ ಧವಳತ್ರಯ ಜೈನ ಕಾಶಿ ಟ್ರಸ್ಟ್ ವತಿಯಿಂದ ಉಚಿತ ಮಧ್ಯಾಹ್ನದ ಬಿಸಿ ಊಟವನ್ನು ನಿರಂತರವಾಗಿ ನೀಡಲಾಗುತ್ತಿದೆ. ಈ ಅನ್ನದಾನ ಯೋಜನೆಯು ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಜೊತೆಗೆ ಅವರ ಸರ್ವಾಂಗೀಣ ಬೆಳವಣಿಗೆಗೂ ಸಹಕಾರಿಯಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶ್ರೀಮಠದ ಟ್ರಸ್ಟ್ ವತಿಯಿಂದ ಕಾಲೇಜಿನ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಕೊಡುಗೆಯಾಗಿ ನೀಡಲಾಯಿತು. ಅಲ್ಲದೆ, ಕಾಲೇಜಿನ ಉಪನ್ಯಾಸಕರಿಗೆ ಸಮವಸ್ತ್ರಗಳನ್ನು ವಿತರಿಸಲಾಯಿತು.

2026-27ನೇ ಸಾಲಿನ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ದೀಪ್ತಿ, ಕಾರ್ಯದರ್ಶಿಯಾಗಿ ಭುವನೇಶ್ವರಿ ಆಯ್ಕೆಯಾದರು.

ಕಾರ್ಯಕ್ರಮವನ್ನು ಉಪನ್ಯಾಸಕಿ ಸರಸ್ವತಿ ನಿರೂಪಿಸಿದರು. ಪ್ರಾಂಶುಪಾಲೆ ಸೌಮ್ಯಶ್ರೀ ಸ್ವಾಗತಿಸಿದರು. ಉಪನ್ಯಾಸಕಿ ಪವನಶ್ರೀ ವಂದಿಸಿದರು.

Leave a Reply

Your email address will not be published. Required fields are marked *