ಕಾರ್ಕಳ: ಉಡುಪಿ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ನವೆಂಬರ್ 24 ರಂದು ಆಯೋಜಿಸಲು ಉದ್ದೇಶಿಸಲಾಗಿದ್ದು, ಈ ಸಮಾವೇಶಕ್ಕೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಫಲಾನುಭವಿಗಳನ್ನು ಕರೆತರುವ ಬಗ್ಗೆ ಮತ್ತು ಊಟೋಪಚಾರಗಳ ವ್ಯವಸ್ಥೆಗೆ ತಗಲುವ ವೆಚ್ಚವನ್ನು ಆಯಾ ಗ್ರಾಮ ಪಂಚಾಯತ್ಗಳ ಸ್ವಂತ ನಿಧಿಯಿಂದ ಗರಿಷ್ಠ 25000/- ರೂ. ಮಿತಿಯ ಒಳಗೆ ಭರಿಸುವ ಬಗ್ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ಹೊರಡಿಸಿರುವ ಆದೇಶವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.

ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ವಿವಿಧ ತುರ್ತು ಅಗತ್ಯಗಳನ್ನು ಎದುರಿಸಲು ಗ್ರಾಮ ಪಂಚಾಯತ್ಗಳಿಗೆ ಹೆಚ್ಚಿನ ಅನುದಾನದ ಅವಶ್ಯಕತೆಯಿದೆ. ಸರ್ಕಾರದ ಅನುದಾನದ ಕೊರತೆಯಿಂದಾಗಿ ಈಗಾಗಲೇ ಗ್ರಾಮ ಪಂಚಾಯತ್ಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನದ ಅಭಾವವಿದೆ. ಗ್ರಾಮೀಣ ಪ್ರದೇಶಗಳ ಕುಡಿಯುವ ನೀರಿನ ವ್ಯವಸ್ಥೆ, ಬೀದಿ ದೀಪಗಳ ನಿರ್ವಹಣೆ, ಸ್ವಚ್ಛತೆ, ರಸ್ತೆ ದುರಸ್ತಿ ಸೇರಿದಂತೆ ಸಾರ್ವಜನಿಕರ ಮೂಲಭೂತ ಅಗತ್ಯಗಳನ್ನು ಪೂರೈಸಲು ಗ್ರಾಮ ಪಂಚಾಯತ್ಗಳ ಸ್ವಂತ ನಿಧಿ ಅತ್ಯಂತ ಅಗತ್ಯವಾಗಿದೆ.
ಇಂತಹ ಸಂದರ್ಭದಲ್ಲಿ ಗ್ರಾಮ ಪಂಚಾಯತ್ಗಳ ಸೀಮಿತ ಸಂಪನ್ಮೂಲವನ್ನು ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮಾವೇಶದ ಖರ್ಚು-ವೆಚ್ಚಗಳಿಗೆ ಬಳಸುವಂತೆ ಸೂಚಿಸುವುದು ಗ್ರಾಮೀಣ ಸ್ಥಳೀಯ ಆಡಳಿತ ವ್ಯವಸ್ಥೆಯ ಮೇಲೆ ಅನಗತ್ಯ ಆರ್ಥಿಕ ಹೊರೆ ಹೊರಿಸಿದಂತಾಗುತ್ತದೆ. ಈಗಾಗಲೇ ಅನುದಾನದ ಕೊರತೆಯಿಂದ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸಲು ಸಂಕಷ್ಟ ಎದುರಿಸುತ್ತಿರುವ ಗ್ರಾಮ ಪಂಚಾಯತ್ಗಳಿಗೆ ಇಂತಹ ಹೆಚ್ಚುವರಿ ಹೊರೆ ಹೇರುವುದು ಸರಿಯಾದ ಕ್ರಮವಲ್ಲ ಎಂದು ಅವರು ತಿಳಿಸಿದ್ದಾರೆ.
ಗ್ರಾಮ ಪಂಚಾಯತ್ಗಳು ಸ್ಥಳೀಯ ಜನರ ಮೂಲಭೂತ ಸಮಸ್ಯೆಗಳಿಗೆ ಸ್ಪಂದಿಸುವ ಹಾಗೂ ಗ್ರಾಮೀಣ ಅಭಿವೃದ್ಧಿಯ ಪ್ರಮುಖ ಕೇಂದ್ರಗಳಾಗಿವೆ. ಗ್ಯಾರಂಟಿ ಸಮಾವೇಶಕ್ಕಾಗಿ ಗ್ರಾಮ ಪಂಚಾಯತ್ ಅನುದಾನ ಬಳಕೆ ಮಾಡುವ ಕುರಿತು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಯಾವುದೇ ಚರ್ಚೆ ನಡೆಸದೆ ಏಕಪಕ್ಷೀಯವಾಗಿ ಹೊರಡಿಸಿರುವ ಈ ಆದೇಶವನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು. ಗ್ಯಾರಂಟಿ ಸಮಾವೇಶಗಳಿಗಾಗಿ ಸರ್ಕಾರದ ಬೇರೆ ಅನುದಾನವನ್ನು ಬಳಕೆ ಮಾಡಿಕೊಂಡು, ಗ್ರಾಮ ಪಂಚಾಯತ್ ಅನುದಾನವನ್ನು ಸ್ಥಳೀಯ ಅಭಿವೃದ್ಧಿ ಕಾಮಗಾರಿಗಳಿಗೆ ಬಳಕೆ ಮಾಡಿಕೊಳ್ಳುವುದು ಸೂಕ್ತವಾಗಿರುತ್ತದೆ. ಆದ್ದರಿಂದ ಗ್ರಾಮ ಪಂಚಾಯತ್ಗಳ ಸ್ವಂತ ನಿಧಿಯಿಂದ ಗರಿಷ್ಠ 25,000 ರೂ. ವೆಚ್ಚ ಭರಿಸುವಂತೆ ಹೊರಡಿಸಿರುವ ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಶಾಸಕ ವಿ. ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.
