ಉಡುಪಿ: ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಕಾರಂತ ಪ್ರತಿಷ್ಠಾನ(ರಿ), ಕೋಟ ಇವರ ಆಶ್ರಯದಲ್ಲಿ ಡಿಸೆಂಬರ್ 28 ರಂದು ಕೋಟ ವಿವೇಕ ಸಂಸ್ಥೆಯ ಮೈದಾನದಲ್ಲಿ ನಡೆಯುವ ಉಡುಪಿ, ದ.ಕ ಜಿಲ್ಲೆಯ
ಪಂಚಾಯತ್ ರಾಜ್ ಜನಪ್ರತಿನಿಧಿಗಳ ಕ್ರೀಡೋತ್ಸವ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಹೊಳಪು-2019 ಕಾರ್ಯಕ್ರಮಕ್ಕೆ ಸಿದ್ಧತೆಗಳು ಭರದಿಂದ ನಡೆದಿವೆ ಎಂದು ರಾಜ್ಯದ ಮುಜರಾಯಿ ಹಾಗೂ ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ
ಹೇಳಿದರು.ಅವರು ಸೋಮವಾರ, ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಮೂಲಕ, ಜಿಲ್ಲಾ ಪಂಚಾಯತ್‍ನ ಎಲ್ಲಾ ಸದಸ್ಯರಿಗೆ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ನೀಡಿ ಮಾತನಾಡಿದರು.ಉಡುಪಿ ಮತ್ತು ದ.ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯತ್ ಮತ್ತು ಎಲ್ಲಾ ಗ್ರಾಮ ಪಂಚಾಯತ್‍ಗಳ ಅಧ್ಯಕ್ಷರು, ಉಪಾಧ್ಯಕ್ಷರು
ಹಾಗೂ ಸದಸ್ಯರು ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದು, ದೂರದಿಂದ ಬರುವ ಸದಸ್ಯರಿಗೆ ವಸತಿ ವ್ಯವಸ್ಥೆ ಮಾಡಲಾಗಿದೆ,ರಾಜ್ಯದ ಗ್ರಾಮೀಣಾಭಿವೃದ್ದಿ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಅಧ್ಯಕ್ಷರು
ಮತ್ತು ಉಪಾಧ್ಯಕ್ಷರ ಸಭೆ ಸಹ ನಡೆಸಲಿದ್ದಾರೆ ಎಂದು ಸಚಿವ ಕೋಟ ತಿಳಿಸಿದರು.ಕಾರ್ಯಕ್ರಮದಲ್ಲಿ ಎಲ್ಲಾ ಸ್ಥಳೀಯ ಸಂಸ್ಥೆಗಳ ಪಥ ಸಂಚಲನ ಆಯೋಜಿಸಿದ್ದು, ಆಕರ್ಷಕ ಬಹುಮಾನ ವಿತರಣೆ ಸಹ ನಡೆಯಲಿದೆ, ಈ ಬಾರಿ ಕೇರಳದಿಂದ ಒಂದು ಜನಪ್ರತಿನಿಧಿಗಳ ತಂಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳ ತಂಡ ಸಹ ಪಥ ಸಂಚಲನದಲ್ಲಿ ಭಾಗವಹಿಸಲಿದ್ದು, ಅವರು ಕ್ರೀಡಾಕೂಟದಲ್ಲಿ ಭಾಗವಹಿಸುವುದಿಲ್ಲ ಎಂದು ಸಚಿವರು ಹೇಳಿದರು.
ಎಲ್ಲಾ ಜಿಲ್ಲಾ ಪಂಚಾಯತ್ ಸದಸ್ಯರು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತ್ ಸದಸ್ಯರೊಂದಿಗೆ ಕ್ರೀಡಾಕೂಟದಲ್ಲಿ ಭಾಗವಹಿಸುವಂತೆ ತಿಳಿಸಿದ ಸಚಿವ ಕೋಟ, ಎಲ್ಲಾ ಪಿಡಿಓಗಳು ಮತ್ತು ತಾಲೂಕು ಪಂಚಾಯತ್ ಕಾರ್ಯ
ನಿರ್ವಹಣಾಧಿಕಾರಿಗಳು ಕ್ರೀಡಾಕೂಟದ ಯಶಸ್ವಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.ಗ್ರಾಮ ಪಂಚಾಯತ್‍ಗಳಲ್ಲಿ ತೆರಿಗೆ ಸಂಗ್ರಹಣೆ, ತ್ಯಾಜ್ಯ ವಿಲೇವಾರಿ, ಕುಡಿಯುವ ನೀರು ಸೌಲಭ್ಯ ಸೇರಿದಂತೆ ವಿವಿಧ 16
ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ತೋರಿದ ಪಂಚಾಯತ್‍ಗಳಿಗೆ ವಿಶೇಷ ಪ್ರಶಸ್ತಿ ನೀಡಲಾಗುವುದು ಎಂದು ಸಚಿವ ಕೋಟ ತಿಳಿಸಿದರು.
ಉಡುಪಿ ಜಿಲ್ಲಾ ಪಂಚಾಯತ್ ವತಿಯಿಂದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಶೆಟ್ಟಿ, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ರಘು ತಿಂಗಳಾಯ, ಸಿಇಓ ಪ್ರೀತಿ ಗೆಹಲೋತ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹಾಗೂ ಜಿಲ್ಲಾ ಪಂಚಾಯತ್
ಸದಸ್ಯರು ಉಪಸ್ಥಿತರಿದ್ದರು.