ಉಡುಪಿ (ಜೂನ್ 30): ಸರಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯಡ್ಕ ಉಡುಪಿ ಜಿಲ್ಲೆ ಇವರ ರಾಷ್ಟ್ರೀಯ ಸೇವಾ ಯೋಜನೆ ಮತ್ತು ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ವತಿಯಿಂದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ವಿರೋಧಿ ದಿನಾಚರಣೆಯನ್ನು ಜೂನ್ 25 ರಂದು ಆನ್‌ಲೈನ್ ಮೂಲಕ ಆಯೋಜಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲರಾದ ಡಾ. ನಿಕೇತನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕೋವಿಡ್‌ನಂತಹ ಮಾರಕ ರೋಗಗಳ ವಿರುದ್ಧ ಹೋರಾಡುತ್ತಿರುವ ಈ ಸಂದಿಗ್ಧ ಪರಿಸ್ಥಿತಿಯ ದಿನಗಳಲ್ಲಿ ಸಧೃಡ ಆರೋಗ್ಯದ ಮಹತ್ವದ ಕುರಿತು ಪ್ರತಿಯೊಬ್ಬರಿಗೂ ಅರಿವಾಗಿದ್ದೂ ವಿದ್ಯಾರ್ಥಿಗಳು ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗಿ ತಮ್ಮ ದೇಹ ಮತ್ತು ಮನಸ್ಸಿನ ಆರೋಗ್ಯವನ್ನು ಹಾಳು ಮಾಡಿಕೊಳ್ಳದೇ ಆರೋಗ್ಯಕರ ಚಟುವಟಿಕೆಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡು ಸದೃಢರಾಗಬೇಕು ಎಂದು ಕಿವಿ ಮಾತು ಹೇಳಿದರು.
ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರವೀಣ್ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಸುಜಯ ಕೆ, ಕಾಲೇಜಿನ ಬೋಧಕೇತರ ವರ್ಗದವರು ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರು , ಕಾಲೇಜು ವಿದ್ಯಾರ್ಥಿಗಳು ಕರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪ್ರವೀಣ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ, ಸುಭಾಶ್ ಹೆಚ್.ಕೆ ವಂದಿಸಿದರು.