ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ ನಿರಾತಂಕವಾಗಿ ಸಾಗುತ್ತಿದೆ. ಆಗಸ್ಟ್ ಮೊದಲ ವಾರದಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆಯ ಫಲಿತಾಂಶ ಹಾಗೂ ಜುಲೈ ಅಂತ್ಯದ ವೇಳೆಗೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಇಂದು ಅವರು ಎಸ್ಎಸ್ಎಲ್ ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಪರಿಶೀಲಿಸಿ ವಿದ್ಯಾರ್ಥಿಗಳನ್ನು ಮಾತನಾಡಿಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಎಸ್ ಎಸ್ಎಲ್ ಸಿ ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಮಕ್ಕಳ ಗೈರು ಹಾಜರಿಯಲ್ಲಿ ಈ ವರ್ಷ ಬಹಳ ವ್ಯತ್ಯಾಸ ಕಂಡುಬರುತ್ತಿಲ್ಲ. ಮಕ್ಕಳು ಉತ್ಸಾಹದಿಂದ ಬರೆಯುತ್ತಿದ್ದಾರೆ ಪರೀಕ್ಷಾ ಕೇಂದ್ರಗಳ ಬಗ್ಗೆ ಮಕ್ಕಳು ಮತ್ತು ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದರು.