ಉಡುಪಿ,(ಎಪ್ರಿಲ್ 19): ದ್ವಿತೀಯ ಪಿಯು ಪರೀಕ್ಷೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ತೇರ್ಗಡೆಯಾಗಿ ಜಿಲ್ಲೆಯು ಪ್ರಥಮ ಸ್ಥಾನ ಪಡೆಯಲಿ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ದ್ವಿತೀಯ ಪಿಯು ವಿದ್ಯಾರ್ಥಿಗಳಿಗಾಗಿ ಸಿದ್ಧಪಡಿಸಿದ್ದ ದಾರಿದೀಪ ಪಾಸಿಂಗ್ ಪ್ಯಾಕೇಜ್ ಕಿರು ಪುಸ್ತಕಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಕೋವಿಡ್ 19 ನಿಂದ ಪಿಯು ತರಗತಿಗಳಿಗೆ ಗೈರು ಹಾಜರಾಗಿ ಕಾಲೇಜಿನಿಂದ ಹೊರಗುಳಿದ ವಿದ್ಯಾರ್ಥಿಗಳಿಗೆ ಹಾಗೂ ಕಲಿಕೆಯಲ್ಲಿ ಹಿಂದುಳಿದಿರುವ ವಿದ್ಯಾರ್ಥಿಗಳಿಗಾಗಿ ಈ ಕಿರು ಪುಸ್ತಕಗಳನ್ನು ಸಿದ್ಧಪಡಿಸಿದ್ದು, ಇದರಿಂದ ವಿದ್ಯಾರ್ಥಿಗಳು ತೇರ್ಗಡೆ ಹೊಂದಲು ಸಹಾಯವಾಗಲಿದೆ. ಜಿಲ್ಲೆಯ ಅಧ್ಯಾಪಕರು 14 ವಿಷಯಗಳ ಕುರಿತು ಸಿದ್ಧಪಡಿಸಲಾದ ಈ ಕಿರುಪುಸ್ತಕಗಳನ್ನು ನಾಡೋಜ ಜಿ.ಶಂಕರ್ ಮತ್ತು ಕೊಲ್ಲೂರು ದೇವಾಲಯದ ಸಹಕಾರದಿಂದ ಮುದ್ರಿಸಿದ್ದು, ಜಿಲ್ಲೆಯ ಒಟ್ಟು 3700 ವಿದ್ಯಾರ್ಥಿಗಳಿಗೆ ಈ ಪುಸ್ತಕಗಳನ್ನು ಮನೆ ಬಾಗಿಲಿಗೆ ತೆರಳಿ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಡಾ. ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಭಗವಂತ ಕಟ್ಟೀಮನಿ ಮತ್ತಿತರರು ಉಪಸ್ಥಿತರಿದ್ದರು.