ಬೆಂಗಳೂರು (ಜು.9):- ದ್ವಿತೀಯ ಪಿಯುಸಿ ಫಲಿತಾಂಶ ಜುಲೈ 20ರೊಳಗೆ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‍ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಅವರು, ಫಲಿತಾಂಶ ಪ್ರಕಟಣೆ ಬಗ್ಗೆ ಈಗಾಗಲೇ ತಿಳಿಸಿದ್ದೇನೆ. ಈಗ ಮತ್ತೊಮ್ಮೆ ಸ್ಪಷ್ಟಪಡಿಸುತ್ತಿದ್ದೇನೆ. ಜುಲೈ 20ರ ಸುಮಾರಿಗೆ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ ಎಂದು ಹೇಳಿದರು.
"ಫಲಿತಾಂಶದ ಕುರಿತು ಅನೇಕ ವಿದ್ಯಾರ್ಥಿಗಳು ನನಗೆ ಫೋನ್ ಮಾಡಿ ಕೇಳುತ್ತಿದ್ದಾರೆ. ಜು.20ರೊಳಗೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ" ಎಂದು ಅವರು ಹೇಳಿದ್ದಾರೆ.
ಕಳೆದ ಮಾ.4ರಿಂದ 21ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ಕೊರೊನಾ ಸಾಂಕ್ರಾಮಿಕ ರೋಗದ ಕಾರಣ ಲಾಕ್‍ಡೌನ್ ಘೋಷಣೆಯಾದ ಹಿನ್ನೆಲೆಯಲ್ಲಿ ಇಂಗ್ಲಿಷ್ ಪರೀಕ್ಷೆ ಮುಂದೂಡಿಕೆಯಾಗಿತ್ತು. ಈ ಪರೀಕ್ಷೆಯನ್ನು ಜೂ.18ರಂದು ನಡೆಸಲಾಗಿತ್ತು.
ಜು.20ರೊಳಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದ್ದು, ಜು.30ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಆನ್‍ಲೈನ್ ತರಗತಿಗಳು ನಡೆಯುತ್ತಿದ್ದು, ಪಿಯು ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯಲು ತಯಾರಿ ನಡೆಸುತ್ತಿದ್ದಾರೆ.
ಕೊರೊನಾ ಸಂಕಷ್ಟದ ನಡುವೆಯೂ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದ್ದು, ಆಗಸ್ಟ್ ಮೊದಲ ವಾರದಲ್ಲಿ ಅದರ ಫಲಿತಾಂಶವೂ ಕೂಡ ಪ್ರಕಟವಾಗುವ ಸಾಧ್ಯತೆ ಇದೆ.