ಕಾರ್ಕಳ,ಆ 01: ಸ್ಥಳೀಯ ಕಾಂಗ್ರೆಸ್‌ ನಾಯಕರ ಒತ್ತಡಕ್ಕೆ ಮಣಿಯುತ್ತಿರುವ ರಾಜ್ಯ ಸರ್ಕಾರವು ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರ್ಕಾರದ ಪ್ರಮುಖ ಇಲಾಖೆಗಳ ಕುಂದಾಪುರ ಸಹಾಯಕ ಕಮಿಷನರ್, ಕಾರ್ಕಳ ತಹಶೀಲ್ದಾರರು, ಕಾರ್ಕಳ ಕಾರ್ಯನಿರ್ವಹಣಾಧಿಕಾರಿಗಳು, ಮೂಡಬಿದ್ರೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಹೆಬ್ರಿ ಹಾಗೂ ಕಾರ್ಕಳ ವನ್ಯಜೀವಿ ವಿಭಾಗದ ವಲಯ ಅರಣ್ಯ ಅಧಿಕಾರಿಗಳು, ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕರು ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳನ್ನು ಅತ್ಯಂತ ಕಡಿಮೆ ಅವಧಿಯಲ್ಲಿ ಅವಧಿಪೂರ್ವವಾಗಿ ವರ್ಗಾವಣೆ ಮಾಡುತ್ತಿದ್ದು, ವರ್ಗಾವಣೆ ಆದ ಸ್ಥಳಕ್ಕೆ ಬದಲಿ ಅಧಿಕಾರಿಗಳನ್ನು ನಿಯೋಜಿಸುತ್ತಿಲ್ಲ. ಇದರಿಂದಾಗಿ ಆಡಳಿತ ಯಂತ್ರ ಕುಸಿದು, ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ.

ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಅಧಿಕಾರಿಗಳ ವರ್ಗಾವಣೆ ದಂಧೆಯಲ್ಲೇ ಮುಳುಗಿರುವ ರಾಜ್ಯ ಸರ್ಕಾರವು ವಿಪಕ್ಷ ಶಾಸಕರ ಕ್ಷೇತ್ರದಲ್ಲಿ ಅಭಿವೃದ್ಧಿ ಸೇರಿದಂತೆ ಪ್ರತಿಯೊಂದು ವಿಷಯಗಳಲ್ಲೂ ಸೇಡಿನ ರಾಜಕಾರಣ ಮಾಡಿಕೊಂಡು ಬರುತ್ತಿದೆ. ಅಧಿಕಾರ ಇದೆ ಎಂಬ ಕಾರಣಕ್ಕಾಗಿ ತಮ್ಮ ಅಣತಿಯಂತೆ ಕೆಲಸ ನಿರ್ವಹಿಸದ ಅಧಿಕಾರಿಗಳನ್ನು ಅತ್ಯಂತ ಕಡಿಮೆ ಅವಧಿಯಲ್ಲಿ ಅವಧಿಪೂರ್ವವಾಗಿ ವರ್ಗಾವಣೆ ಮಾಡುತ್ತಿರುವುದು ಹಾಗೂ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಅತ್ಯಂತ ಖಂಡನೀಯ. 

ಪ್ರಸ್ತುತ ಕಾರ್ಕಳ ಸೇರಿದಂತೆ ಕರಾವಳಿ ಭಾಗದಲ್ಲಿ ಅತೀ ಹೆಚ್ಚು ಮಳೆಯಾಗುತ್ತಿದ್ದು, ತಹಶೀಲ್ದಾರರು ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳ ಸೇವೆಯು ಅತ್ಯಂತ ಅವಶ್ಯಕವಾಗಿದ್ದು, ಪ್ರಾಕೃತಿಕ ವಿಕೋಪದಂತಹ ತುರ್ತು ಸಂದರ್ಭಗಳಲ್ಲಿ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳನ್ನು ಸ್ಥಳೀಯ ಕಾಂಗ್ರೆಸ್ ನಾಯಕರ ಸ್ವ-ಹಿತಾಸಕ್ತಿಗೆ ವರ್ಗಾವಣೆ ಮಾಡುತ್ತಿರುವುದು ಕಾಂಗ್ರೆಸ್ನ ನೀಚ ರಾಜಕಾರಣವನ್ನು ಪ್ರತಿಬಿಂಬಿಸುತ್ತದೆ. ಪ್ರತಿಯೊಂದು ವಿಷಯದಲ್ಲೂ ದ್ವೇಷ ಹಾಗೂ ಸೇಡಿನ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ಸಿಗೆ ಮುಂದಿನ ದಿನಗಳಲ್ಲಿ ಜನತೆ ತಕ್ಕ ಪಾಠ ಕಲಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದರು.