ಮಂಗಳೂರು, ಏ. 23: ನಕಾರಾತ್ಮಕ ಭಾವನೆಗಳನ್ನು ಸಕಾರಾತ್ಮಕವಾಗಿ ಬದಲಾಯಿಸಿಕೊಳ್ಳುವಲ್ಲಿ ವಿಜ್ಞಾನದ ಪ್ರಯೋಗಗಳು ಸಹಕಾರಿ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ರಸಾಯನಶಾಸ್ತ್ರ ವಿಭಾಗದ ಗ್ಲಾಸ್ ಬ್ಲೋವರ್ ಎ. ರಾಜೇಂದ್ರನ್ ಹೇಳಿದರು.
ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಭವನದಲ್ಲಿ ರಸಾಯನಶಾಸ್ತ್ರ ವಿಭಾಗ, ಸ್ನಾತ್ತಕೋತ್ತರ ರಸಾಯನಶಾಸ್ತ್ರ ವಿಭಾಗ ಮತ್ತು ಆಂತರಿಕ ಗುಣಮಟ್ಟ ಖಾತರಿ ಕೋಶ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಗಾಜಿನ ಸಲಕರಣೆಗಳ ತಯಾರಿಕೆ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಪ್ರಯೋಗಾಲಯದಲ್ಲಿ ಮಾಡುವ ಪ್ರಯೋಗಗಳನ್ನು ನಿತ್ಯದ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಟೆಸ್ಟ್ ಟ್ಯೂಬ್ ಹಾಗೂ ಇನ್ನಿತರ ಗಾಜಿನ ಸಲಕರಣೆಗಳನ್ನು ಆಕ್ಸಿಜನ್ ಬರ್ನರ್ ಮತ್ತು ಎಲ್ ಪಿ ಜಿ ಗ್ಯಾಸ್ ಮುಖಾಂತರ ತಯಾರಿ ಮಾಡಲಾಗುತ್ತದೆ ಎಂದು ಪ್ರಾತ್ಯಕ್ಷಿಕೆ ಮೂಲಕ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ, ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶವನ್ನು ವಿಭಾಗದ ವತಿಯಿಂದ ಒದಗಿಸಿಕೊಡಲಾಗಿದೆ. ಇದರ ಸದುಪಯೋಗವನ್ನು ಎಲ್ಲಾ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ರಸಾಯನಶಾಸ್ತ್ರ ವಿಭಾಗದ ಸಂಯೋಜಕ ಡಾ. ಸಂಜಯ್ ಅಣ್ಣಾರಾವ್, ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಲಕ್ಷ್ಮಣ್ ಕೆ., ಭೌತಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಅರುಣಾ ಕುಮಾರಿ, ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಡಾ. ಇಂದಿರಾ ಜೆ. ಹಾಗೂ ವಿವಿಧ ವಿಭಾಗಗಳ ಉಪನ್ಯಾಸಕರು ಉಪಸ್ಥಿತರಿದ್ದರು.