ಮಂಗಳೂರು: ದಿ. ದೇವರಾಜ ಅರಸು ಅವರು ಮುಖ್ಯಮಂತ್ರಿ ಆಗಿದ್ದ ಕಾಲದಲ್ಲಿ ಭೂ ಸುಧಾರಣಾ ಕಾಯಿದೆಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಗೊಂಡು ರಾಜ್ಯದಲ್ಲಿಯೇ ಅತ್ಯಧಿಕ ಪ್ರಯೋಜನ ಪಡೆದ ಜಿಲ್ಲೆಯಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆನಂದ್ ಕೆ ಅವರು ಹೇಳಿದರು.

ಅವರು ಅವರು ಮಂಗಳವಾರ ಜಿಲ್ಲಾ ಪಂಚಾಯತ್ ನೇತ್ರವತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದೊಂದಿಗೆ ಡಿ. ದೇವರಾಜ ಅರಸು ಅವರ 109ನೇ ಜನದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ಜಾರಿಗೆ ತಂದ ಭೂ ಸುಧಾರಣಾ ಕಾಯಿದೆಗೆ ದೇಶದ ಹಲವುಡೆ ಪ್ರತಿರೋಧ ಎದುರಾಗಿತ್ತು ಆದರೆ ಕೇರಳ ಮತ್ತು ಕರ್ನಾಟಕದಲ್ಲಿ ಇದು ಪರಿಣಾಮಕಾರಿಯಾಗಿ ಜಾರಿಗೊಂಡಿತು. ಕರ್ನಾಟಕದ ಅಂದಿನ ಮುಖ್ಯಮಂತ್ರಿಗಳಾಗಿದ್ದ ದೇವರಾಜು ಅರಸು ಅವರು ಭೂ ಸುಧಾರಣೆ ಕಾಯ್ದೆಯನ್ನು ತನ್ನ ದಿಟ್ಟ ನಾಯಕತ್ವದಿಂದ ಜಾರಿಗೊಳಿಸುವ ಮೂಲಕ ಲಕ್ಷಾಂತರ ಮಂದಿ ಭೂ ರಹಿತರಿಗೆ ಭೂ ಒಡೆಯರಾಗಲು ಸಾಧ್ಯವಾಯಿತು ಎಂದು ಹೇಳಿದರು.

ದ.ಕ ಜಿಲ್ಲೆಯಲ್ಲಿ ಭೂ ಸುಧಾರಣಾ ಕಾಯಿದೆ ಸಮರ್ಥವಾಗಿ ಜಾರಿಗೊಂಡು ಇಲ್ಲಿನ ಬಹುತೇಕ ಗ್ರಾಮದಲ್ಲಿ ಸಾವಿರಾರು ಮಂದಿಗೆ ಭೂಮಿಯ ಮಾಲೀಕತ್ವ ದೊರೆಯಿತು ಎಂದು ಅವರು ಹೇಳಿದರು.

ಉಪನ್ಯಾಸ ನೀಡಿದ ಬಿಸಿ ರೋಡ್ ಸರಕಾರಿ ಪದವಿ ಪೂರ್ವ ಕಾಲೇಜು ಉಸನ್ಯಾಸಕ ಅಬ್ದುಲ್ ರಝಾಕ್ ಮಾತನಾಡಿ, ದೇವರಾಜು ಅರಸು ಅವರ ದೂರ ದೃಷ್ಟಿಯ ಫಲವಾಗಿ ಇಂದು ಹಿಂದುಳಿದ ವರ್ಗದಲ್ಲಿ ಬಹಳಷ್ಟು ಪ್ರತಿಭಾವಂತರು ಸೃಷ್ಟಿಯಾಗಿದ್ದಾರೆ. ಹಾಸ್ಟೆಲುಗಳನ್ನು ಸ್ಥಾಪಿಸುವ ಮೂಲಕ ಸಮಾಜದ ಅತ್ಯಂತ ಕೆಳ ಸ್ಥರದ ಸಮುದಾಯಗಳ ವಿದ್ಯಾರ್ಥಿಗಳಿಗೂ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ದೊರಕಿ ಇಂದು ಸಮಾಜದಲ್ಲಿ ಉನ್ನತ ಸ್ಥಾನದಲ್ಲಿ ಇದ್ದಾರೆ ಎಂದು ಹೇಳಿದರು.

ಭೂ ಸುಧಾರಣೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ದೇವರಾಜು ಅರಸು ಅವರು ದಕ್ಷಿಣ ಕನ್ನಡ ಜಿಲ್ಲೆಯವರಾದ ಅಂದಿನ ಸಚಿವರಾಗಿದ್ದ ಸುಬ್ಬಯ್ಯ ಶೆಟ್ಟಿ ಅವರಿಗೆ ಜವಾಬ್ದಾರಿ ವಹಿಸಿದ್ದರು ಎಂದು ಅವರು ಸ್ಮರಿಸಿದರು. ಬೆಂಗಳೂರಿನಲ್ಲಿ ಭಿಕ್ಷುಕರ ಕಾಲೋನಿ ಸ್ಥಾಪಿಸುವ ಮೂಲಕ ಅವರ ಸಂಕಟಗಳಿಗೆ ಆಸರೆಯಾಗಿದ್ದು ಅರಸು ಅವರಿಗೆ ಸಮಾಜದ ಕಟ್ಟ ಕಡೆಯ ವ್ಯಕ್ತಿಗಳ ಬಗ್ಗೆ ಇದ್ದ ಕಾಳಜಿಗೆ ಸಾಕ್ಷಿಯಾಗಿದೆ ಎಂದರು.

ಸಮಾರಂಭದಲ್ಲಿ ಕಳೆದ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ಹಿಂದುಳಿದ ಹಾಸ್ಟೆಲ್ ಗಳ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮಂಗಳೂರು ನಗಾರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್, ಜಂಟಿ ಕೃಷಿ ನಿರ್ದೇಶಕ ಕೆಂಪೇಗೌಡ, ಪಶು ಸಂಗೋಪನೆ ಉಪನಿರ್ದೇಶಕ ಅರುಣ್ ಶೆಟ್ಟಿ ಉಪಸ್ಥಿತರಿದ್ದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಬಿಂದಿಯಾ ನಾಯಕ ಸ್ವಾಗತಿಸಿದರು.