ಮಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೇರಳ ಹಾಗೂ ಗೋವಾ ರಾಜ್ಯಗಳ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮವು ನವೆಂಬರ್ 16ರಂದು ಬೆಳಿಗ್ಗೆ 11 ಗಂಟೆಗೆ ಮಂಜೇಶ್ವರ ಹೊಸಬೆಟ್ಟು ಕಲಾಸ್ಪರ್ಶಂ ಅಡಿಟೋರಿಯಂನಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಉದ್ಘಾಟಿಸಲಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಪ್ರಶಸ್ತಿ ಪ್ರದಾನ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕೆ.ಎಂ ಅಶ್ರಫ್ ವಹಿಸಲಿದ್ದಾರೆ.
2023-24ನೇ ಸಾಲಿನ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಸ್.ಎಸ್.ಎಲ್.ಸಿ. ತರಗತಿಗಳನ್ನು ಕನ್ನಡ ಮಾಧ್ಯಮದಲ್ಲಿ ಅಭ್ಯಸಿಸಿ ಅತಿಹೆಚ್ಚು ಅಂಕಗಳಿಸಿದ ಕೇರಳ ರಾಜ್ಯದ 143 ಹಾಗೂ ಗೋವಾ ರಾಜ್ಯದ 6 ವಿದ್ಯಾರ್ಥಿಗಳು ಸೇರಿ ಒಟ್ಟು 149 ವಿದ್ಯಾರ್ಥಿಗಳನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಗದು ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಗುತ್ತದೆ.
ಶಾಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ ರೂ.12,000/- ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗೆ ರೂ.11,000/- ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗೆ ರೂ.10,000/-ದ ಜೊತೆಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಗುತ್ತದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.