ಮಂಗಳೂರು: ಆಟೋ ರಿಕ್ಷಾದಲ್ಲಿ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದ ರಿಕ್ಷಾ ಚಾಲಕನನ್ನು ಪತ್ತೆ ಹಚ್ಚಿ 75 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಮಂಗಳೂರು ನಗರಕ್ಕೆ ಬೆಂಗಳೂರಿನಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಪಾರ್ಸೆಲ್ ಮೂಲಕ ಸಾಗಾಟ ಮಾಡಿಕೊಂಡು ಅದನ್ನು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಆಟೋ ರಿಕ್ಷಾದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಾರ್ಚ್ 04 ರಂದು ಮಂಗಳೂರು ನಗರದ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ರಿಕ್ಷಾವನ್ನು ಪತ್ತೆ ಹಚ್ಚಿ ,

ಮೊಹಮ್ಮದ್ ಅಬ್ದುಲ್ ಜಲೀಲ್(32), ತಂದೆ: ದಿ.ಅಬ್ದುಲ್ ಬಶೀರ್, ವಾಸ: MJM 543, ಕಸಬಾ ಬೆಂಗರೆ, ಮಂಗಳೂರು.

ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನ ವಶದಿಂದ 3,75,000/- ರೂ ಮೌಲ್ಯದ 75 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್, ಕೆಎ-19-ಎಡಿ-3531 ಬಜಾಜ್ ಆಟೋ ರಿಕ್ಷಾವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 5 ಲಕ್ಷ ಆಗಬಹುದು. ಈ ಬಗ್ಗೆ  ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. 

ಆರೋಪಿಯು ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಬೆಂಗಳೂರಿನಿಂದ ಬಸ್ ನಲ್ಲಿ ಪಾರ್ಸೆಲ್ ಮೂಲಕ ಮಾದಕ ವಸ್ತುವಾದ ಎಂಡಿಎಂಎ ಸಾಗಾಟ ಮಾಡಿಕೊಂಡು ಮಂಗಳೂರು ನಗರದಲ್ಲಿನ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದನು. ಈ ಮಾದಕ ವಸ್ತು  ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.  ಈತನು ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಮಾದಕ ವಸ್ತುಗಳ ಮಾರಾಟ ದಂಧೆ ನಡೆಸುತ್ತಿರುವುದಾಗಿದೆ. 

ಈ ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯವನ್ನು ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ರವರ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕರಾದ ರಫೀಕ್ ಕೆ ಎಂ ರವರ ನೇತೃತ್ವದಲ್ಲಿ ಪಿಎಸ್ಐ ಸುದೀಪ್ ಎಂ ವಿ, ಎಎಸ್ಐ ರಾಮ ಪೂಜಾರಿ  ಹಾಗೂ ಸಿಸಿಬಿ ಸಿಬ್ಬಂದಿಯವರು ಕೈಗೊಂಡಿದ್ದರು.