ಮಂಗಳೂರು: ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರ ಪರವಾಗಿ ಹೊಸದಿಲ್ಲಿಯ ರಾಷ್ಟ್ರಪತಿ ಭವನದಲ್ಲಿ ಪದ್ಮವಿಭೂಷಣ ಪ್ರಶಸ್ತಿ ಸ್ವೀಕರಿಸಿ ಮಂಗಳೂರಿಗೆ ಗುರುವಾರ ಬೆಳಗ್ಗೆ ಆಗಮಿಸಿದ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಅದ್ದೂರಿಯಾಗಿ ಕಲ್ಕೂರ ಪ್ರತಿಷ್ಠಾನ ಹಾಗೂ ವಿವಿಧ ಸಂಘ ಸಂಸ್ಥೆಗಳು ಅವರನ್ನು ಸ್ವಾಗತಿಸಿ ಗೌರವಿಸಿದರು.

ಕದ್ರಿ ಮಂಜುಪ್ರಾಸಾದದಲ್ಲಿ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಮೆರವಣಿಗೆಯಲ್ಲಿ ಕರೆತಂದು ಗೌರವಾರ್ಪಣೆ ನಡೆಸಲಾಯಿತು.

ಪ್ರಶಸ್ತಿ ಪ್ರದಾನ ಸಮಾರಂಭದ ವೇಳೆ ರಾಷ್ಟ್ರಪತಿ, ನಾವು ಗುರುಗಳಿಗೆ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದೆವು. ಈ ಸಂದರ್ಭದಲ್ಲಿ ಗುರುಗಳು ಇರಬೇಕಿತ್ತು ಎಂದು ಹೇಳಿದರು. ಗುರುಗಳ ವ್ಯಕ್ತಿಗತ ಗುಣ ಗಮನಿಸಿ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಪ್ರಶಸ್ತಿ ಪತ್ರದಲ್ಲಿ ಬರೆಯಲಾಗಿದೆ. ಈ ಹಿನ್ನೆಲೆಯಲ್ಲಿ ವಿಶ್ವೇಶತೀರ್ಥ ಸ್ವಾಮೀಜಿ ಅವರಿಗೆ ದೊರೆತ ಪದ್ಮವಿಭೂಷಣ ಮಹತ್ವವಾದುದು ಎಂದರು.

ಕರ್ಣಾಟಕ ಬ್ಯಾಂಕ್ ಎಂಡಿ ಮತ್ತು ಸಿಇಒ ಮಹಾಬಲೇಶ್ವರ ಎಂ.ಎಸ್., ಪಿ. ಜಯರಾಮ ಭಟ್, ವಿಹಿಂಪ ಪ್ರಾಂತ ಅಧ್ಯಕ್ಷ ಪ್ರೊ. ಎಂ.ಬಿ. ಪುರಾಣಿಕ್,ಪ್ರಮುಖರಾದ ಹರಿಕೃಷ್ಣ ಪುನರೂರು, ಪ್ರದೀಪ ಕುಮಾರ ಕಲ್ಕೂರ, ಭುವನಾಭಿರಾಮ ಉಡುಪ, ಕದ್ರಿ ನವನೀತ ಶೆಟ್ಟಿ, ಸುಧಾಕರ ರಾವ್ ಪೇಜಾವರ ಉಪಸ್ಥಿತರಿದ್ದರು.