ಬೆಂಗಳೂರು:- ಜೂನ್ 21 ರಿಂದ ಪ್ರಾರಂಭವಾಗಬೇಕಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆ ಮುಂದೆ ಯಾವಾಗ ನಡೆಯುತ್ತದೆ ಎಂದು ಇನ್ನೂ ದಿನಾಂಕವನ್ನು ಪ್ರಕಟಿಸಿಲ್ಲ. ನಂತರದ ದಿನಗಳಲ್ಲಿ ಹೊಸ ದಿನಾಂಕ ತಿಳಿಸುವುದಾಗಿ ಅವರು ಹೇಳಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕು ದಿನೇದಿನೆ ಹೆಚ್ಚುತ್ತಿರುವುದರಿಂದ ವಿದ್ಯಾರ್ಥಿಗಳು, ಶಾಲಾ ಸಂಘಟನೆಗಳು, ಶಿಕ್ಷಕರು, ಪಾಲಕರ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದಾಗಿ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಇನ್ನು ಕೊರೊನಾ ಹಿನ್ನೆಲೆಯಲ್ಲಿ ದೇಶಾದ್ಯಂತ ಬಹುತೇಕ ಎಲ್ಲ ರೀತಿಯ ಆಫ್ಲೈನ್ ಪರೀಕ್ಷೆಗಳನ್ನೂ ಮುಂದೂಡಲಾಗುತ್ತಿದೆ. ವಿದ್ಯಾರ್ಥಿಗಳು ವಿಚಲಿತರಾಗದೆ ಅಧ್ಯಯನ ಮುಂದುವರಿಸಬೇಕು ಎಂದೂ ಶಿಕ್ಷಣ ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.