ಉಡುಪಿ: ಮಕ್ಕಳು ಪೌಷ್ಠಿಕಾಂಶದಿಂದ ಕೂಡಿದ ಆಹಾರವನ್ನು ಸೇವಿಸಿದರೂ ಸಹ ಜಂತುಹುಳುಗಳ ಭಾದೆಯಿಂದ ಅಪೌಷ್ಟಿಕತೆ ಹಾಗೂ ರಕ್ತಹೀನತೆ ಉಂಟಾಗಿ ಮಕ್ಕಳ ಶಾರೀರಿಕ ಮತ್ತು ಬೌದ್ಧಿಕ ಬೆಳವಣಿಗೆ ಮೇಲೆ ಪರಿಣಾಮ ಬೀರಲಿದೆ. ಜಂತುಹುಳುಗಳ ಬಾಧೆಯಿಂದ ಮಕ್ಕಳ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ 1 ರಿಂದ 19 ವರ್ಷದೊಳಗಿನ ಜಿಲ್ಲೆಯ ಎಲ್ಲಾ ಮಕ್ಕಳಿಗೆ ಅಲ್ಬೆಂಡಾಝೋಲ್ ಮಾತ್ರೆಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.
ಅವರು ನಗರದ ಒಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಪದವಿ ಶಿಕ್ಷಣ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ಕೈಗಾರಿಕಾ ಶಿಕ್ಷಣ ಮತ್ತು ಉದ್ಯೋಗ ಇಲಾಖೆ, ಕಾರ್ಮಿಕ ಇಲಾಖೆ, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದಲ್ಲಿ 1 ರಿಂದ 5 ವರ್ಷದ ಮಕ್ಕಳಿಗೆ ಅಂಗನವಾಡಿಗಳಲ್ಲಿ ಹಾಗೂ 6 ರಿಂದ 19 ವರ್ಷದೊಳಗಿನವರಿಗೆ ಸರಕಾರಿ, ಅನುದಾನಿತ, ಖಾಸಗಿ ಶಾಲಾ-ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಮಾತ್ರೆಗಳನ್ನು ವಿತರಿಸಲಾಗುತ್ತದೆ ಎಂದರು.
ಅಂಗನವಾಡಿಯಲ್ಲಿ ದಾಖಲಾದ, ದಾಖಲಾಗದ ಮತ್ತು ಶಾಲೆಯಿಂದ ಹೊರಗುಳಿದ ಎಲ್ಲಾ ಮಕ್ಕಳಿಗೂ ಜಂತುಹುಳು ನಿವಾರಣಾ ಮಾತ್ರೆಗಳನ್ನು ಅಂಗನವಾಡಿ ಕೇಂದ್ರಗಳಲ್ಲಿ ನೀಡಲಾಗುವುದು ಎಂದ ಅವರು, ಜಂತುಹುಳು ನಿವಾರಣಾ ದಿನದಂದು ಜಂತುಹುಳು ಮಾತ್ರೆ ನೀಡದ ಮಕ್ಕಳಿಗೆ ಮಾಪ್ ಅಪ್ ಡೇ ದಿನವಾದ ಡಿಸೆಂಬರ್ 16 ರಂದು ನೀಡಲಾಗುವುದು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ್ ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳು ಸರ್ವತೋಮುಖ ಅಭಿವೃದ್ಧಿ ಹೊಂದಲು ಆರೋಗ್ಯ ಅತೀ ಮುಖ್ಯವಾಗಿದೆ. ಜಂತುಹುಳದ ಸಮಸ್ಯೆಯಿಂದ ಮಕ್ಕಳಲ್ಲಿ ರಕ್ತ ಹೀನತೆ ಉಂಟಾಗಿ ಅಪೌಷ್ಠಿಕತೆ ಕಂಡುಬರುತ್ತಿದ್ದು, ಇದು ಅವರುಗಳ ಆಟ-ಪಾಠಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಜಂತು ಹುಳದ ನಿವಾರಣೆಗೆ ಮಕ್ಕಳು ಮಾತ್ರೆ ಸೇವನೆಯಿಂದ ಮಾತ್ರವಲ್ಲದೇ ಕಡ್ಡಾಯವಾಗಿ ಶೌಚಾಲಯಗಳನ್ನು ಉಪಯೋಗಿಸಿದ ನಂತರ ಕೈತೊಳೆಯುವುದು, ಪರಿಸರದ ಸ್ವಚ್ಛತೆ ಕಾಪಾಡುವುದು, ಮಲವಿಸರ್ಜನೆಗೆ ಶೌಚಾಲಯವನ್ನೇ ಬಳಸುವುದು ಸೇರಿದಂತೆ ಮತ್ತಿತರ ಸುರಕ್ಷತಾ ವಿಧಾನಗಳಿಂದ ಜಂತುಹುಳು ಭಾದೆಯಿಂದ ರಕ್ಷಿಸಿಕೊಳ್ಳಬಹುದಾಗಿದೆ ಎಂದ ಅವರು, ಜಿಲ್ಲೆಯಲ್ಲಿ ಒಟ್ಟು 269675 ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆಯನ್ನು ನೀಡಲಾಗುವುದು, ಈ ಬಗ್ಗೆ ಅಂಗನವಾಡಿ, ಆಶಾ ಕಾರ್ಯಕರ್ತೆಯರುಗಳಿಗೆ ತರಬೇತಿಯನ್ನು ಸಹ ನೀಡಲಾಗಿದೆ ಎಂದರು.
ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ರಮೇಶ್ ಹೆಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮಕ್ಕಳಿಗೆ ಅಲ್ಬೆಂಡಾಝೋಲ್ ಮಾತ್ರೆಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಮೈಸೂರು ವಿಭಾಗದ ವಿಭಾಗೀಯ ಆರೋಗ್ಯ ಮತ್ತು ಕು.ಕ ಸೇವೆಗಳ ನಿರ್ದೇಶನಾಲಯದ ಉಪನಿರ್ದೇಶಕಿ ಡಾ. ಮಲ್ಲಿಕಾ ಬಿ, ನಗರಸಭೆ ಕೌನ್ಸಿಲರ್ ಹರೀಶ್ ಶೆಟ್ಟಿ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಜ್ಯೋತ್ಸ್ನಾ ಬಿ.ಕೆ, ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಸುಜಾತ ನಾಯಕ್, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಕುಸುಮಾ, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಹೆಚ್ ನಿರೂಪಿಸಿ, ಪ್ರೌಢಶಾಲಾ ಶಿಕ್ಷಕ ಗಣಪತಿ ಭಟ್ ವಂದಿಸಿದರು.