ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕಲಾಜಾಥಾ ಕಾರ್ಯಕ್ರಮವನ್ನು ಆಯೋಜಿಸಿದ್ದು, ಜಿಲ್ಲೆಯ ಎಲ್ಲಾ ಅರ್ಹ ಫಲಾನುಭವಿಗಳಿಗೂ ಗ್ಯಾರಂಟಿ ಯೋಜನೆಗಳು ತಲುಪಬೇಕು. ಈಗಲೂ ಸಹ ಈ ಯೋಜನೆಗಳ ಲಾಭ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶವಿದೆ. ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.
ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಆವರಣದಲ್ಲಿ ವಾರ್ತಾ ಮತ್ತು ಸಾರ್ವಜನಿಕರ ಸಂಪರ್ಕ ಇಲಾಖೆಯ ವತಿಯಿಂದ ಜಿಲ್ಲೆಯಾದ್ಯಂತ ಸಂಚರಿಸಿ, ಮಾಹಿತಿ ನೀಡಲಿರುವ ಕಲಾಜಾಥಾ ವಾಹನಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು.
ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಯುವನಿಧಿ ಯೋಜನೆಗಳು ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಆರ್ಥಿಕ ಬೆಂಬಲ ನೀಡುವ ಉದ್ದೇಶದಿಂದ ಜಾರಿಗೆ ತರಲಾಗಿದೆ. ಜಿಲ್ಲೆಯಲ್ಲಿ ಬಹುತೇಕ ಜನರು ಒಂದಲ್ಲಾ ಒಂದು ಗ್ಯಾರಂಟಿ ಯೋಜನೆಯ ಫಲಾನುಭವಿಗಳು ಇದ್ದಾರೆ. ಜಿಲ್ಲೆಯ ಅರ್ಹ ಪ್ರತಿಯೊಬ್ಬರಿಗೂ ಯೋಜನೆಯನ್ನು ತಲುಪಿಸುವ ಉದ್ದೇಶದಿಂದ ಕಲಾಜಾಥದ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಹೊಸದಾಗಿ ಅರ್ಜಿ ಸಲ್ಲಿಸುವವರಿಗೆ ಕಾಲಮಿತಿ ಇರುವುದಿಲ್ಲ. ಅರ್ಹರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಜಿಲ್ಲೆಯಾದ್ಯಂತ ಕಲಾಜಾಥಾ ವಾಹನವು ಸಂಚರಿಸಿ, ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಲಿದೆ. ಈಗಾಗಲೇ ರಾಜ್ಯಾದ್ಯಂತ ಪಂಚ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಅನುಷ್ಠಾನಗೊಳಿಸಿದೆ. ಇದು ಸಾಮಾನ್ಯರಿಗೂ ತಲುಪಬೇಕೆಂಬುದು ಇದರ ಉದ್ದೇಶ. ಪಂಚ ಗ್ಯಾರಂಟಿಗಳ ಯೋಜನೆಯಿಂದ ಯಾರಾದರೂ ಬಿಟ್ಟು ಹೋದಲ್ಲಿ ಮಾಹಿತಿ ಪಡೆದು, ಯೋಜನೆಗಳಿಗೆ ಅರ್ಜಿ ಸಲ್ಲಿಸಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು.
ಪಂಚ ಗ್ಯಾರಂಟಿ ಯೋಜನೆಗಳನ್ನು ಸೂಕ್ತ ರೀತಿಯಲ್ಲಿ ಜನಸಾಮಾನ್ಯರು ಉಪಯೋಗಮಾಡಿಕೊಳ್ಳಬೇಕು. ಶಕ್ತಿ ಯೋಜನೆಯಡಿ ಹೆಣ್ಣು ಮಕ್ಕಳು ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಉಚಿತವಾಗಿ ಸಂಚರಿಸುವಾಗ ಅಗತ್ಯವಿದ್ದಾಗ ಮಾತ್ರ ಬಳಸಬೇಕು. ಅನಗತ್ಯವಾಗಿ ಸಂಚಾರ ಮಾಡುವುದು ಸೂಕ್ತವಲ್ಲ ಎಂದ ಅವರು, ಅದೇ ರೀತಿ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್‍ಚ್ಛಕ್ತಿ ಸೌಲಭ್ಯವನ್ನು ಅನಗತ್ಯವಾಗಿ ಲೈಟ್‍ಗಳನ್ನು ಬಳಸುವುದು, ಮತ್ತಿತರ ವಿದ್ಯುತ್ ಸಲಕರಣೆಗಳನ್ನು ಬಳಸಬಾರದು. ಅಗತ್ಯಕ್ಕೆ ಅನುಸಾರವಾಗಿ ಮಾತ್ರ ಉಪಯೋಗ ಮಾಡಿಕೊಂಡಾಗ ಈ ಯೋಜನೆಗಳ ಪ್ರಯೋಜನವು ಮತ್ತಷ್ಟು ಜನರಿಗೆ ದೊರಕಿದಂತಾಗುತ್ತದೆ ಎಂದರು.
ಉಡುಪಿ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೆಶ್ ಕಾಂಚನ್ ಮಾತನಾಡಿ, ರಾಜ್ಯದ ಬಹುಪಾಲು ಜನರ ಬದುಕಿಗೆ ಆಧಾರವಾಗಿರುವ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಆಸರೆಯಾಗಿವೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಈ ಯೋಜನೆಗಳು ತಲುಪಬೇಕು. ಈ ಎಲ್ಲಾ ಯೋಜನೆಗಳು ಮಹಿಳೆಯರ ಪಾಲಿಗೆ ವರದಾನವಾಗಿವೆ ಎಂದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ವಾರ್ತಾಧಿಕಾರಿ ಮಂಜುನಾಥ್ ಬಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಕಲಾವಿದರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕಲಾಜಾಥಾ ಅಂಗವಾಗಿ ಜಿಲ್ಲೆಯ ವಿವಿಧ ಭಾಗಗಳಿಗೆ ಪ್ರಚಾರ ವಾಹನ ಹಾಗೂ ಕ್ಷೇತ್ರ ಪ್ರಚಾರ ಕಲಾ ತಂಡಗಳು ತೆರಳಿ ಗ್ಯಾರಂಟಿ ಸೇರಿದಂತೆ ವಿವಿಧ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲಿದೆ.