ಉಡುಪಿ:  ಜಿಲ್ಲೆಯಲ್ಲಿ ಸುರಿದ ಮುಂಗಾರು ಮಳೆಯಿಂದ ಉಂಟಾದ ಮೂಲಸೌಕರ್ಯಗಳ ಹಾನಿಯ ಪುನ್ಹರ್ ನಿರ್ಮಾಣ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ ವಾಡಿಕೆಗಿಂತ ಹೆಚ್ಚು ಮಳೆ ಸುರಿದು ರಸ್ತೆ, ವಿದ್ಯುತ್ ಕಂಬ ಸೇರಿದಂತೆ ಮತ್ತಿತರ ಮೂಲಸೌಕರ್ಯಗಳ ಕಾಮಗಾರಿಗಳನ್ನು ಕೈಗೊಳ್ಳಲು ಈಗಾಗಲೇ ಅನುದಾನ ಬಿಡುಗಡೆಯಾಗಿದ್ದು, ಅವುಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಬೇಕು ಎಂದರು.

ಯಾವುದೇ ಇಲಾಖೆಗಳು ಈಗಾಗಲೇ ಆಗಿರುವ ಮನೆಹಾನಿ, ಮಾನವ ಜೀವ ಹಾನಿ, ಜಾನುವಾರು ಜೀವ ಹಾನಿಗೆ ಸಂಬಂಧಿಸಿದಂತೆ ಪರಿಹಾರ ಬಾಕಿ ಇರಿಸಿಕೊಳ್ಳಬಾರದು. ಶಾಲೆ, ಅಂಗನವಾಡಿ ಹಾಗೂ ರಸ್ತೆ ತುರ್ತು ದುರಸ್ಥಿ ಕಾರ್ಯಗಳಿಗೆ ಬಿಡುಗಡೆಯಾಗಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ತ್ವರಿತಗತಿಯಲ್ಲಿ ಕೆಲಸಗಳನ್ನು ಪೂರ್ಣಗೊಳಿಸಬೇಕು ಎಂದ ಅವರು, ತಹಶೀಲ್ದಾರರುಗಳು ಕಾಮಗಾರಿಗಳನ್ನು ಸ್ಥಳ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಸೂಚನೆ ನೀಡಿದರು. 

ಮುಂಗಾರು ಮಳೆಯಿಂದ ಮನೆಹಾನಿ, ಬೆಳೆಹಾನಿಗೆ ಒಳಗಾದವರಿಗೆ ಪರಿಹಾರದ ಹಣವನ್ನು ನೀಡುವುದು ಬಾಕಿ ಇದ್ದಲ್ಲಿ ಆದಷ್ಟು ಬೇಗನೆ ಅರ್ಹ ಫಲಾನುಭವಿಗಳಿಗೆ ಪರಿಹಾರದ ಹಣವನ್ನು ನೀಡಬೇಕು ಎಂದ ಅವರು, ವಿಪತ್ತು ನಿರ್ವಹಣಾ ಕಾರ್ಯಗಳು ಯಾವಾಗ ಬೇಕಾದರೂ ಸಂಭವಿಸುವ ಸಾಧ್ಯತೆ ಇರುವುದರಿಂದ ಅವುಗಳನ್ನು ಎದುರಿಸಲು ಸದಾ ಸನ್ನದ್ಧರಾಗಿರಬೇಕು ಎಂದರು. 

ಭೂಕುಸಿತಗಳಿಂದಾಗುವ ಅಪಾಯಗಳನ್ನು ತಪ್ಪಿಸಿ, ಜನ ಹಾಗೂ ಜಾನುವಾರುಗಳ ಜೀವಕ್ಕೆ ಅಪಾಯವಾಗದಂತೆ ಸಾಕಷ್ಟು ಮುಂಚಿತವಾಗಿಯೇ ಮುನ್ನೆಚ್ಚರಿಕಾ ಕಾಮಗಾರಿಗಳನ್ನು ವಹಿಸುವ ಉದ್ದೇಶದಿಂದ ಈಗಾಗಲೇ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಭೂಕುಸಿತ ಪ್ರದೇಶಗಳನ್ನು ಗುರುತಿಸಿ, ವೈಜ್ಞಾನಿಕವಾಗಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಇವುಗಳ ಗುಣಮಟ್ಟವನ್ನು ತಹಶೀಲ್ದಾರರು ಪರಿಶೀಲಿಸಬೇಕು ಎಂದರು.

ಜಿಲ್ಲಾ ವಿಪತ್ತು ನಿರ್ವಹಣಾ ಕ್ರಮಕ್ಕೆ ಈಗಾಗಲೇ ಪಿ.ಡಿ ಖಾತೆಯಲ್ಲಿ 10 ಕೋಟಿ 39 ಲಕ್ಷ ರೂ. ಅನುದಾನ ಲಭ್ಯವಿದೆ. ಈಗಾಗಲೇ ತಾಲೂಕು ಮಟ್ಟದ ತಹಶೀಲ್ದಾರರ ವಿಪತ್ತು ಪಿ.ಡಿ ಖಾತೆಯಲ್ಲಿ 163.42 ಲಕ್ಷ ರೂ. ಅನುದಾನ ಲಭ್ಯವಿದ್ದು, ಬರ ನಿರ್ವಹಣೆಗೆ ಸಂಬಂಧಪಟ್ಟಂತೆ ಅನುದಾನದಲ್ಲಿ ಯಾವುದೇ ಕೊರತೆ ಇರುವುದಿಲ್ಲ ಎಂದರು.

ಸಭೆಯಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕ ರವೀಂದ್ರ, ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕಿ ಪೂರ್ಣಿಮಾ ಜಿ.ಸಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ಭುವನೇಶ್ವರಿ,ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ತಹಶೀಲ್ದಾರ್‍ಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.