ಉಡುಪಿ, ಅ 24: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಅಕ್ಟೋಬರ್ 26 ರಂದು ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇರ ನೇಮಕಾತಿ ಕಡ್ಡಾಯ ಕನ್ನಡ ಭಾಷೆ ಪರೀಕ್ಷೆ ಹಾಗೂ ಅಕ್ಟೋಬರ್ 27 ರಂದು ಸ್ಪಧಾತ್ಮಕ ಪರೀಕ್ಷೆಯು ಜಿಲ್ಲೆಯಲ್ಲಿ ನಿಗಧಿಪಡಿಸಿರುವ ಒಟ್ಟು 15 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗಧಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023 ರ ಕಲಂ 163 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

ಈ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರಗಳ 200 ಮೀ. ಸುತ್ತ ಸೈಬರ್ ಮತ್ತು ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು, ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ನಿಷೇಧಿತ ಪ್ರದೇಶವೆಂದು ಜಾರಿಗೊಳಿಸಿದ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಗುಂಪು ಸೇರುವುದು ಅಥವಾ ತಿರುಗುವುದನ್ನು, ಅನುಮಾನಾಸ್ಪದ ವ್ಯಕ್ತಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವುದನ್ನು ನಿಷೇಧಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.