ಉಜಿರೆ: “ದೇಹಕ್ಕೆ ರೋಗ ನಿರೋಧಕ ಶಕ್ತಿ ಇದೆ ಹಾಗೂ ಮರಳಿ ಪ್ರಕೃತಿಗೆ” ತತ್ವದ ನೆಲೆಯಲ್ಲಿ ಇದೇ ಮೇ 12 ರಿಂದ 16 ರ ವರೆಗೆ ಉಜಿರೆಯಲ್ಲಿರುವ ಎಸ್.ಡಿ.ಎಂ. ಪ್ರಕೃತಿಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಮೂರನೆ ಅಂತಾ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ ಶೆಟ್ಟಿ ಹೇಳಿದರು.

ಅವರು ಬುಧವಾರ ಕಾಲೇಜಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಪ್ರಾಯೋಜಕತ್ವದಲ್ಲಿ ಭಾರತೀಯ ಪ್ರಕೃತಿಚಿಕಿತ್ಸಾ ಮತ್ತು ಯೋಗ ಪದವೀಧರ ವೈದ್ಯರ ಸಂಘ ಹಾಗೂ ಕೇಂದ್ರ ಸರ್ಕಾರದ ಆಯುಷ್ ಇಲಾಖೆಯ ಜಂಟಿ ಸಹಭಾಗಿತ್ವದಲ್ಲಿ ನಡೆಸುವ ಮೂರನೆ ಅಂತಾರಾಷ್ಟ್ರೀಯ  ಸಮ್ಮೇಳನದಲ್ಲಿ ಸಂಶೋಧನೆ ಹಾಗೂ ವೈಜ್ಞಾನಿಕ ನೆಲೆಯಲ್ಲಿ ಪ್ರಕೃತಿ ಚಿಕಿತ್ಸಾ ಪದ್ಧತಿ ಮತ್ತು ಯೋಗ ವಿಜ್ಞಾನದ ಬಳಕೆ, ಆರೋಗ್ಯಭಾಗ್ಯ ಸಂರಕ್ಷಣೆ ಮತ್ತು ಆರೋಗ್ಯ ವರ್ಧನೆ ಕುರಿತು ಚರ್ಚಿಸಲಾಗುವುದು.

ವಸ್ತುಪ್ರದರ್ಶನ, ಹಿರಿಯ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ಮತ್ತು ಸಂವಾದ, ಸಾಂಸ್ಕೃತಿಕ ಸ್ಪರ್ಧೆಗಳು ಹಾಗೂ ಕ್ರೀಡಾ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಧರ್ಮಸ್ಥಳದ ಶಾಂತಿವನದಲ್ಲಿರುವ ಪ್ರಕೃತಿಚಿಕಿತ್ಸಾ ಆಸ್ಪತ್ರೆಯ ಮುಖ್ಯವೈದ್ಯಾಧಿಕಾರಿ ಡಾ. ಶಿವಪ್ರಸಾದ ಶೆಟ್ಟಿ ಮಾತನಾಡಿ, 300 ಮಂದಿ ಪ್ರತಿನಿಧಿಗಳು ಹಾಗೂ 10,000 ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ಭರದಿಂದ ಸಿದ್ಧತೆಗಳು ನಡೆಯುತ್ತಿವೆ ಎಂದರು.

ಬೆಂಗಳೂರಿನ ಡಾ. ನವೀನ್, ಕೆ.ವಿ., ಕ್ಷೇಮವನದ ಮುಖ್ಯ ವೈದ್ಯಾಧಿಕಾರಿ ಡಾ. ನರೇಂದ್ರ ಶೆಟ್ಟಿ, ಡೀನ್ ಡಾ. ಗೀತಾ, ಬಿ. ಶೆಟ್ಟಿ, ಉಪಪ್ರಾಂಶುಪಾಲರಾದ ಡಾ. ಸುಜಾತಾ ಕೆ. ಮತ್ತು ಯೋಗ ನಿರ್ದೇಶಕ ಡಾ. ಶಶಿಕಾಂತ ಜೈನ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದು ಪೂರಕ ಮಾಹಿತಿ ನೀಡಿದರು.