ಉಡುಪಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲೆಯಲ್ಲಿ ಏಪ್ರಿಲ್ 28 ರಂದು ನಡೆಯುವ ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮವನ್ನು ಅತ್ಯಂತ ವೈಭವದಿಂದ ಆಚರಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಶಾಸಕ ರಘುಪತಿ ಭಟ್ ಸೂಚಿಸಿದರು.

 ಅವರು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ ನಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

  ರಾಷ್ಟ್ರ ದ 75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಈ ಅವಧಿಯಲ್ಲಿ, ರಾಷ್ಟ್ರದ್ಯಂತ ಸ್ವಾತಂತ್ರ್ಯ ಸಂಗ್ರಾಮದ ನೆನಪುಗಳನ್ನು ಮೆಲಕು ಹಾಕುತ್ತಾ, ಸ್ವಾತಂತ್ರ್ಯ ಹೋರಾಟಕ್ಕೆ ತಮ್ಮನ್ನೇ ತಾವು ತೊಡಗಿಸಿಕೊಂಡು ಜೀವತ್ಯಾಗ ಮಾಡಿದ ಹೋರಾಟಗಾರರ ಜೀವನಗಾಥೆ ಹಾಗೂ  ಸ್ವಾತಂತ್ರ್ಯ ಹೋರಾಟಕ್ಕೆ ಕರ್ನಾಟಕದ ಕೊಡುಗೆಯನ್ನು ಇಂದಿನ ಯುವ ಜನಾಂಗಕ್ಕೆ ಮತ್ತು ಸಾರ್ವಜನಿಕರಿಗೆ ಹಾಗೂ ರಾಷ್ಟ್ರಕ್ಕೆ ತಿಳಿಸುವ ಉದ್ದೇಶದಿಂದ ನಡೆಯುತ್ತಿರುವ ಈ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಅತ್ಯಂತ ವೈಭವವಾಗಿ ಮತ್ತು ಅರ್ಥಪೂರ್ಣವಾಗಿ ಅಚರಿಸಲು ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಿದರು.

 ಕಾರ್ಯಕ್ರಮದ ಅಂಗವಾಗಿ ವಿವಿಧ ಕಲಾತಂಡಗಳಿoದ ಆಕರ್ಷಕ ಮೆರವಣಿಗೆ ಏರ್ಪಡಿಸುವಂತೆ ಸೂಚಿಸಿದ ಅವರು, ವಿದ್ಯಾರ್ಥಿಗಳು ಹಾಗೂ ಸ್ತ್ರೀ ಶಕ್ತಿ ಸಂಘಗಳ ಕಾರ್ಯಕರ್ತರಿಂದ ಮೆರವಣಿಗೆ ಸೇರಿದಂತೆ , ಕಾರ್ಯಕ್ರಮದಲ್ಲಿ ಸುಮಾರು 5000 ಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲ ರಿಗೂ ಭೋಜನ ವ್ಯವಸ್ಥೆ ಮಾಡುವಂತೆ ಹಾಗೂ ಮಳೆಗಾಲದ ಕಾರಣ ಕಾರ್ಯಕ್ರಮ ನಡೆಯುವ ಅಜ್ಜರಕಾಡು ಕ್ರೀಡಾಂಗಣದಲ್ಲಿ ಸೂಕ್ತ ಚಪ್ಪರ , ಶಾಮಿಯಾನ ಮತ್ತು ವೇದಿಕೆ ನಿರ್ಮಿಸುವಂತೆ ಸೂಚನೆ ನೀಡಿದರು.

 ಪೊಲೀಸ್ ಇಲಾಖೆವತಿಯಿಂದ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಒದಗಿಸುವಂತೆ , ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್, ನಗರಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳೂ ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದರು. 

  ಸ್ವಾತಂತ್ರ್ಯದ ಅಮೃತ ಮಹೋತ್ಸವ ಕುರಿತಂತೆ ಅಜ್ಜರಕಾಡು ಗಾಂಧೀ ಪಾರ್ಕ್ ನಲ್ಲಿ ಶಿಲಾಫಲಕ ಅಳವಡಿಸಲು ಹಾಗೂ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಕಿರುಚಿತ್ರ ಪ್ರದರ್ಶನಕ್ಕೆ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು, ಜಿಲ್ಲೆಯಲ್ಲಿ ನಡೆಯುವ ಕಾರ್ಯಕ್ರಮ ಮಾದರಿ ಕಾರ್ಯಕ್ರಮವಾಗುವ ರೀತಿಯಲ್ಲಿ ಎಲ್ಲಾ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ತಮಗೆ ನೀಡಿರುವ ಜವಾಬ್ದಾರಿಗಳನ್ನು ಯಾವುದೇ ಲೋಪಕ್ಕೆ ಆಸ್ಪದ ನೀಡದಂತೆ ನಿರ್ವಹಿಸಬೇಕು ಹಾಗೂ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಪ್ಪದೇ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದರು. 

 ಸಭೆಯಲ್ಲಿ ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರರ್ಣ ಪೆಡ್ನೇಕರ್, ಉಡುಪಿ ತಹಸೀಲ್ದಾರ್ ಅರ್ಚನಾ ಭಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.