ಉಡುಪಿ,(ಮಾರ್ಚ್ 1): ಕ್ರೀಡೆಯಲ್ಲಿ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು. ಕ್ರೀಡೆಯಿಂದ ಆತ್ಮ ವಿಶ್ವಾಸ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಹೇಳಿದರು. ಅವರು ಇಂದು ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ, ಮಂಗಳೂರು ವಿಶ್ವವಿದ್ಯಾಲಯ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಉಡುಪಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ಡಾ. ಜಿ ಶಂಕರ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ, ಉಡುಪಿ ಜಿಲ್ಲಾ ಅಮೆಚೂರು ಅತ್ಲೆಟಿಕ್  ಅಸೋಸಿಯೇಷನ್ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 40 ನೇ ಮಂಗಳೂರು ವಿಶ್ವ ವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಪುರುಷರ ಮತ್ತು ಮಹಿಳೆಯರ ಹಾಗೂ ಉಡುಪಿ ಜಿಲ್ಲಾ ಮಟ್ಟದ ಕಿರಿಯರ ಕ್ರೀಡಾಕೂಟ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರತಿಯೊಬ್ಬರೂ ಯಾವುದಾದರೊಂದು ಕ್ರೀಡೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು. ಕೊರೊನಾ ಲಾಕ್‌ಡೌನ್ ನಂತರ ಇಡೀ ರಾಜ್ಯದಲ್ಲಿ ಕ್ರೀಡಾಕೂಟ ಸ್ತಬ್ಧವಾದಾಗ ಉಡುಪಿ ಜಿಲ್ಲೆಯಲ್ಲಿ ಮಾತ್ರ ಕಳೆದ ಜನವರಿ 26 ರಿಂದ ಹಲವಾರು ಕ್ರೀಡಾಕೂಟಗಳು ನಡೆಯುತ್ತಾ ಇವೆ. ನಿರಂತರವಾಗಿ ಕ್ರೀಡಾಕೂಟಗಳು ನಡೆದು ಕ್ರೀಡಾಪ್ರತಿಭೆಗಳು ಹೊರಹೊಮ್ಮಬೇಕು. ಪಠ್ಯೇತರ ಚಟುವಟಿಕೆಗಳ ಜೊತೆಗೆ ವಿದ್ಯಾರ್ಥಿಗಳು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಕೊಳ್ಳಬೇಕು ಎಂದು ದಿನಕರ ಬಾಬು ಹೇಳಿದರು.

ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ ದೈಹಿಕ ಶಿಕ್ಷಣದ ಮಹತ್ವ ಎಂಬ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿ, ಕ್ರೀಡೆ ಒಂದು ದೈಹಿಕ ವಿಕಸನ, ಮಾನಸಿಕ ವಿಕಸನ ಆಗಿರುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.

ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕ ಕಿಶೋರ್‌ಕುಮಾರ್ ಸಿ.ಕೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ದ.ಕ ಮತ್ತು ಉಡುಪಿ ಮೀನು ಮಾರಾಟ ಮಹಾಮಂಡಳಿಯ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ಉಡುಪಿ ಜಿಲ್ಲಾ ಅಮೆಚೂರು ಅತ್ಲೆಟಿಕ್ ಅಸೋಸಿಯೇಷನ್ ಗೌರವಾಧ್ಯಕ್ಷ ಬಾಲಕೃಷ್ಣ ಹೆಗ್ಡೆ, ಉಡುಪಿ ಜಿಲ್ಲಾ ಅಮೆಚೂರು ಅತ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಕೆಂಪರಾಜ್ ಹೆಚ್. ಬಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಡಾ. ಜಿ ಶಂಕರ್ ಮಹಿಳಾ ಕಾಲೇಜಿನ ಪ್ರಾಂಶುಪಾಲ ಭಾಸ್ಕರ ಶೆಟ್ಟಿ ಸ್ವಾಗತಿಸಿ, ದೈಹಿಕ ಶಿಕ್ಷಕ ಪ್ರಶಾಂತ್ ವಂದಿಸಿ ನಿರೂಪಿಸಿದರು.