ಉಡುಪಿ,(ಮಾಚ್ 17) : ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಹೆಚ್ಚಿನ ಜನರಿಗೆ ಉದ್ಯೋಗ ನೀಡುವ ಸಲುವಾಗಿ ಜಿಲ್ಲೆಯಲ್ಲಿ ಏಪ್ರಿಲ್ 1 ರಿಂದ ದುಡಿಯೋಣ ಬಾ ಅಭಿಯಾನವನ್ನು ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಆಯೋಜಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಹೇಳಿದರು.ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಜಿಲ್ಲೆಯಲ್ಲಿ ಫೆಬ್ರವರಿ ಅಂತ್ಯದ ವೇಳೆಗೆ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ 6.52 ಲಕ್ಷ ಮಾನವ ದಿನಗಳ ಉದ್ಯೋಗ ಸೃಷ್ಠಿಸಿ ಶೇ.132 ರಷ್ಟು ಸಾಧನೆ ಮಾಡಿದ್ದು, ಏಪ್ರಿಲ್ 1 ರಿಂದ ಮೇ ಅಂತ್ಯದವರೆಗೆ ದುಡಿಯೋಣ ಬಾ ಅಭಿಯಾನದ ಮೂಲಕ ಎಲ್ಲಾ ಪಂಚಾಯತ್‌ಗಳಲ್ಲಿ ಪ್ರತಿ ತಿಂಗಳು 600 ರಿಂದ 700 ಮಾನದ ದಿನಗಳ ಉದ್ಯೋಗ ಸೃಜಿಸುವ ಮೂಲಕ 3 ಲಕ್ಷ ಮಾನವ ದಿನಗಳನ್ನು ಸೃಜಿಸುವ ಗುರಿ ಹೊಂದಿದ್ದು, ಈ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಾವಿ ಮತ್ತು ಕೆರೆಗಳ ಹೂಳೆತ್ತುವ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುವುದು ಎಂದು ಅಧ್ಯಕ್ಷರು ಹೇಳಿದರು.

ಜಿಲ್ಲೆಯಲ್ಲಿನ ಶಾಲೆಗಳ ದಾಖಲಾತಿಗಳನ್ನು ಸಂರಕ್ಷಿಸಲು, ಶಾಲೆಗೆ ಸಂಬoಧಿಸಿದ ಎಲ್ಲಾ ದಾಖಲೆಗಳನ್ನು ಇ-ಡಾಕ್ಯೂಮೆಂಟ್ಮಾ ಡುವ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಡಿಡಿಪಿಐ ಗೆ ಸೂಚಿಸಿದ ಅಧ್ಯಕ್ಷರು, ಜಿಲ್ಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಸೂಕ್ತ ರೀತಿಯಲ್ಲಿ ಮೌಲ್ಯಮಾಪನ ಮಾಡಿ, ಮರು ಮೌಲ್ಯಮಾಪನಕ್ಕೆ ಅವಕಾಶ ನೀಡದಂತೆ ಕಾರ್ಯನಿರ್ವಹಿಸುವ ಬಗ್ಗೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಗೆ ಪತ್ರ ಬರೆಯುವಂತೆ ತಿಳಿಸಿದರು. ಅನೇಕ ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಅಭ್ಯಾಸ ನಡೆಸಿ, ಉತ್ತರ ಬರೆದಿದ್ದರೂ ಸಹ, ಮರು ಮೌಲ್ಯಮಾಪನದ ಶುಲ್ಕ ಪಾವತಿಗೆ ಹಣವಿಲ್ಲದ ಕಾರಣ ಗರಿಷ್ಠ ಅಂಕ ಪಡೆಯುವುದರಿಂದ ವಂಚಿತರಾಗುತ್ತಾರೆ ಎಂದು ದಿನಕರ ಬಾಬು ಹೇಳಿದರು.

ಜಿಲ್ಲೆಯಲ್ಲಿ ಮಳೆಯಿಂದ ಸೋರುವ ಶಾಲಾ ಕಟ್ಟಡಗಳು ಮತ್ತು ಅಂಗನವಾಡಿಗಳನ್ನು ಪ್ರಾಕೃತಿಕ ವಿಕೋಪ ನಿಧಿಯಡಿ ದುರಸ್ಥಿಪಡಿಸುವ ಕುರಿತಂತೆ ಜಿಲ್ಲಾಧಿಕಾರಿಗಳಿಗೆ ಪ್ರಸ್ಥಾವನೆ ಸಲ್ಲಿಸಿ, ಇನ್ನು 2 ತಿಂಗಳಲ್ಲಿ ಮಳೆಗಾಲ ಆರಂಭಗೊಳ್ಳಲಿದ್ದು, ಶೀಘ್ರದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧ್ಯಕ್ಷರು ಸೂಚಿಸಿದರು.

ಒಂದೇ ಶಾಲೆಯಲ್ಲಿ 25 ರಿಂದ 30 ವರ್ಷ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದು, ಇದರಿಂದ ಶಿಕ್ಷಣ ಗುಣಮಟ್ಟ ಕುಂಠಿತಗೊಳ್ಳಲಿದೆ. ಆದ್ದರಿಂದ ಶಾಲೆಗಳ ಶಿಕ್ಷಣ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ, ಕ್ಲಸ್ಟರ್ ಮಟ್ಟದಲ್ಲಿ ಅಥವಾ ಪಂಚಾಯತ್ ಮಟ್ಟದಲ್ಲಿ ಆದರೂ 3 ರಿಂದ 5 ವರ್ಷಗಳಿಗೊಮ್ಮೆ ಶಿಕ್ಷಕರನ್ನು ವರ್ಗಾಯಿಸುವ ಕುರಿತಂತೆ ಜಿಲ್ಲಾ ಪಂಚಾಯತ್ ಮೂಲಕ ನಿರ್ಣಯ ಮಾಡಿ ಸರ್ಕಾರಕ್ಕೆ ಕಳುಹಿಸಬೇಕು ಎಂದು ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಾಳಿ ಹೇಳಿದರು.ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಜಿಲ್ಲೆಯ ಪಾಸಿಟಿವ್ ದರ 1.4% ಇದೆ. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು, ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರು ಲಸಿಕೆ ಪಡೆಯುವ ಪ್ರಮಾಣ ಜಿಲ್ಲೆಯಲ್ಲಿ ಉತ್ತಮವಾಗಿದ್ದು, ಹಿರಿಯ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಾಸುದೇವ ತಿಳಿಸಿದರು.

ಗ್ರಾಮ ಪಂಚಾಯತ್ ಮಟ್ಟದಲ್ಲೂ ಸಹ ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವ ಕುರಿತಂತೆ ಎಲ್ಲಾ ಪಿಡಿಓ ಗಳಿಗೆ ಈಗಾಗಲೆ ಸೂಚನೆ ನೀಡಲಾಗಿದ್ದು, ಜಿಲ್ಲೆಯಲ್ಲಿ ಪ್ರತಿದಿನ 2000 ಮಂದಿಗೆ ಕೋವಿಡ್ ಟೆಸ್ಟಿಂಗ್ ಮಾಡಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಜಿ ಪುತ್ರನ್, ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಯೋಜನಾ ನಿರ್ದೇಶಕ ಬಾಬು, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ಹಾ ಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.