ಮಂಗಳೂರು: ಪತ್ರಕರ್ತರ ಹಿತದೃಷ್ಟಿಯಿಂದ ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘ ಅಸ್ತಿತ್ವಕ್ಕೆ ಬಂದಿರುವುದು ಉತ್ತಮ ಬೆಳವಣಿಗೆ. ಸೊಸೈಟಿಯ ಮೂಲಕ ಉತ್ತಮ ಕೆಲಸಗಳಾಗಬೇಕು. ಎಸ್‌ಸಿಡಿಸಿಸಿ ಬ್ಯಾಂಕ್ ವತಿಯಿಂದ ಅಗತ್ಯ ನೆರವನ್ನು ನೀಡಲಾಗುವುದು ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು.
ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ವತಿಯಿಂದ ಸೋಮವಾರ ಮಂಗಳೂರು ಪತ್ರಿಕಾಭವನದಲ್ಲಿ ಆಯೋಜಿಸಿದ್ದ ಷೇರು ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಸೊಸೈಟಿಯ ಷೇರುದಾರರಿಗೆ ಷೇರು ಪತ್ರ ವಿತರಿಸಿ ಅವರು ಮಾತನಾಡಿದರು.
ಪತ್ರಕರ್ತರು ತಮ್ಮ ವೃತ್ತಿಯೊಂದಿಗೆ ಶಕ್ತಿಯಾಗಿ ಬೆಳೆಯಬೇಕು. ಸಮಾಜಕ್ಕೆ ಪೂರಕವಾದ ಕೆಲಸಗಳನ್ನು ಮಾಡಬೇಕು. ಗೃಹ ನಿರ್ಮಾಣ ಸೊಸೈಟಿಯ ಮೂಲಕ ಪತ್ರಕರ್ತರ ಮನೆ ನಿರ್ಮಾಣದ ಕನಸು ಈಡೇರಲಿ. ತಮ್ಮ ಬ್ಯಾಂಕ್ ಅಗತ್ಯ ನೆರವನ್ನು ನೀಡಲು ಬದ್ಧವಾಗಿದೆ ಎಂದು ರಾಜೇಂದ್ರ ಕುಮಾರ್ ಶುಭ ಹಾರೈಸಿದರು.
ಮುಖ್ಯಅತಿಥಿಯಾಗಿದ್ದ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಸಹಕಾರಿ ಕುಟುಂಬಕ್ಕೆ ಪತ್ರಕರ್ತರು ಸೇರ್ಪಡೆಗೊಳ್ಳುತ್ತಿರುವುದು ಸಂತಸದ ವಿಷಯ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯನ್ನು ಒಳಗೊಂಡಂತೆ ಒಟ್ಟು 1500 ಸಹಕಾರಿ ಸಂಸ್ಥೆಗಳಿದ್ದು, ಇದೀಗ ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘವೂ ಸೇರ್ಪಡೆಯಾಗಿದೆ. ಈ ಸಂಘದ ಮೂಲಕ ಸಾಕಷ್ಟು ಕೆಲಸಗಳನ್ನು ಮಾಡಲು ಅವಕಾಶವಿದ್ದು, ಆ ನಿಟ್ಟಿನಲ್ಲಿ ಕೆಲಸ ಸಾಗಲಿ ಎಂದು ಶುಙ ಹಾರೈಸಿದರು.
ಇದೇ ಸಂದರ್ಭ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಜಯಕರ ಶೆಟ್ಟಿ ಇಂದ್ರಾಳಿ ಮತ್ತು ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಅವರನ್ನು ಗೌರವಿಸಲಾಯಿತು.
ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಪ್ರಭಾರ) ಅಭಿಷೇಕ್ ಕೆ ವೇದಿಕೆಯಲ್ಲಿದ್ದರು. ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಉಪಾಧ್ಯಕ್ಷ ಭಾಸ್ಕರ ರೈ ಕಟ್ಟವಂದಿಸಿದರು. ನಿರ್ದೇಶಕಿ ಸತ್ಯಾ ಕೆ ಕಾರ್ಯಕ್ರಮ ನಿರೂಪಿಸಿದರು.