ಮಂಗಳೂರು:- ಜಿಲ್ಲೆಯಲ್ಲಿ ಲಸಿಕೆ ಪಡೆಯದವರನ್ನು ಹುಡುಕಿ ಅವರಿಗೆ ಲಸಿಕೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸೂಚಿಸಿದರು.
ಅವರು ಫೆ.2 ರ ಬುಧುವಾರ ವಚ್ರ್ಯುಯಲ್ ಮೂಲಕ ಜಿಲ್ಲಾ ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.
ಆಯಾ ತಾಲೂಕಿನ ತಹಶೀಲ್ದಾರ್, ಪಂಚಾಯತ್ ಅಧಿಕಾರಿಗಳು ಮತ್ತು ಆಶಾ ಕಾರ್ಯಕರ್ತರ ಸಹಕಾರದೊಂದಿಗೆ ಮನೆಮನೆಗಳಿಗೆ ಭೇಟಿ ನೀಡಿ ಇನ್ನೂ ಕೂಡ ಲಸಿಕೆ ಪಡೆಯದೆ ಇರುವವರನ್ನು ಗುರುತಿಸಿ ಲಸಿಕೆ ನೀಡಬೇಕು ಎಂದು ತಿಳಿಸಿದರು.
ಲಸಿಕಾಕರಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಿ ಶನಿವಾರದೊಳಗೆ ಜಿಲ್ಲೆಯಲ್ಲಿ ಶೇ 100 ರಷ್ಟು ಲಸಿಕೆ ಆಗಿರುವ ಬಗ್ಗೆ ವರದಿ ನೀಡುವಂತೆ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಕಿಶೋರ್ ಕುಮಾರ್ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳು ಭಾಗವಹಿಸಿದ್ದರು.