ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಕಾರ್ಯಕ್ರಮ

ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಕಾರ್ಯಕ್ರಮ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಗುರುವಾರ ನಡೆಯಿತು.

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್, ಇಂದಿರಾ ಗಾಂಧಿ ಅವರು ದೇಶದ ಏಕತೆ, ಸಮಗ್ರತೆ ಮತ್ತು ಬಡವರ ಕಲ್ಯಾಣಕ್ಕಾಗಿ ದಿಟ್ಟ ನಿರ್ಧಾರಗಳನ್ನು ಕೈಗೊಂಡ ಧೀಮಂತ ನಾಯಕಿಯಾಗಿದ್ದರು. ಬ್ಯಾಂಕುಗಳ ರಾಷ್ಟ್ರೀಕರಣ, ರಾಜಧನ ರದ್ದತಿ, ಭೂ ಸುಧಾರಣೆ, ಗರೀಬಿ ಹಠಾವೊ, 20 ಅಂಶಗಳ ಆರ್ಥಿಕ ಕಾರ್ಯಕ್ರಮಗಳ ಮೂಲಕ ದೇಶದ ಆರ್ಥಿಕ ಮತ್ತು ಸಾಮಾಜಿಕ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತಂದರು. ಹಸಿರು ಕ್ರಾಂತಿ ಹಾಗೂ ಶ್ವೇತ ಕ್ರಾಂತಿಗೆ ಉತ್ತೇಜನ ನೀಡುವ ಮೂಲಕ ಭಾರತ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲು ಪ್ರಮುಖ ಕೊಡುಗೆ ನೀಡಿದರು ಎಂದು ಹೇಳಿದರು.

ಬ್ಯಾಂಕುಗಳ ರಾಷ್ಟ್ರೀಕರಣದ ಮೂಲಕ ಬಡವರು ಮತ್ತು ಗ್ರಾಮೀಣ ಜನರಿಗೆ ಆರ್ಥಿಕ ವ್ಯವಸ್ಥೆಯಲ್ಲಿ ಅವಕಾಶ ಕಲ್ಪಿಸಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ವಿಶಿಷ್ಟ ಗೌರವ ಮತ್ತು ಸ್ಥಾನಮಾನ ತಂದುಕೊಟ್ಟ ಅವರು, ಬಡವರು, ರೈತರು, ಕಾರ್ಮಿಕರು ಹಾಗೂ ಶೋಷಿತ ವರ್ಗಗಳ ಏಳಿಗೆಗಾಗಿ ಶ್ರಮಿಸಿದರು. ಅವರ ರಾಜಕೀಯ ಜೀವನ, ಧೈರ್ಯ, ನಾಯಕತ್ವ ಮತ್ತು ದೇಶಕ್ಕಾಗಿ ಮಾಡಿದ ತ್ಯಾಗ ಇಂದಿನ ಯುವ ಪೀಳಿಗೆಗೆ ಸದಾ ಪ್ರೇರಣೆಯಾಗಿದೆ ಎಂದು ಸ್ಮರಿಸಿದರು.

ಈ ಸಂದರ್ಭ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ ಟಿ.ಎಂ ಶಾಹೀದ್ ತೆಕ್ಕಿಲ್, ಮೂಡಾ ಮಾಜಿ ಅಧ್ಯಕ್ಷ ಸದಾಶಿವ್ ಉಳ್ಳಾಲ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಜಿಲ್ಲಾ ಕಾಂಗ್ರೆಸ್ ಮುಂಚೂಣಿ ಘಟಕಾಧ್ಯಕ್ಷರಾದ ಎಸ್.ಅಪ್ಪಿ, ಶಾಹುಲ್ ಹಮೀದ್, ತಾ.ಪಂ. ಮಾಜಿ ಅಧ್ಯಕ್ಷ ಮೊಹಮ್ಮದ್ ಮೋನು ಮಲಾರ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮುಖಂಡರಾದ ಕೆ.ಪಿ. ಥೋಮಸ್, ಟಿ. ಹೊನ್ನಯ್ಯ, ಪದ್ಮನಾಭ ಕಲ್ಲಡ್ಕ, ಜೆ.ಅಬ್ದುಲ್ ಸಲೀಂ, ಟಿ.ಕೆ ಸುಧೀರ್, ಸಂಶುದ್ದೀನ್ ಕುದ್ರೋಳಿ, ಸುದರ್ಶನ್ ಜೈನ್, ನಾಗೇಂದ್ರ, ಕೇಶವ ಮರೋಳಿ, ಯೋಗಿಶ್ ಕುಮಾರ್, ಆರೀಫ್ ಬಾವಾ, ಮಂಜುಳಾ ನಾಯಕ್, ಗೀತಾ ಅತ್ತಾವರ ಮತ್ತಿತರರು ಉಪಸ್ಥಿತರಿದ್ದರು.

ಡಿಸಿಸಿ ಉಪಾಧ್ಯಕ್ಷ ಶುಭೋದಯ ಆಳ್ವ ಕಾರ್ಯಕ್ರಮ ನಿರೂಪಿಸಿದರು. ಶೈಲಜಾ ಬಂಟ್ವಾಳ ವಂದಿಸಿದರು.

Leave a Reply

Your email address will not be published. Required fields are marked *